ಬೆಂಗಳೂರು: ಚುನಾವಣೆಗೂ ಮುನ್ನ, ಚುನಾವಣೆ ಸಂದರ್ಭದಲ್ಲಿ ಹಾಗೂ ಚುನಾವಣಾ ನಂತರದ ಭ್ರಷ್ಟಾಚಾರ, ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗೌತಮ್ ಎಂ.ಗೌಡ, ಮಾಜಿ ಸಿ.ಎಂ. ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಭಾರತ ಚುನಾವಣಾ ಆಯೋಗ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿತು.
ಚುನಾವಣಾ ಪೂರ್ವ, ಚುನಾವಣೆ ಸಂದರ್ಭದಲ್ಲಿ ಹಾಗೂ ಚುನಾವಣಾ ನಂತರದ ಭ್ರಷ್ಟಾಚಾರ, ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣಾ ಅಕ್ರಮ, ಆಮಿಷಗಳನ್ನು ತಡೆಗಟ್ಟಲು ಈಗಿರುವ ಕಾನೂನು-ನಿಯಮಗಳನ್ನು ಮರು ಪರಿಶೀಲಿಸಬೇಕು. ಚುನಾವಣೆ ವೇಳೆ ಹಣದ ಆಮಿಷಗಳನ್ನು ಪತ್ತೆ ಹಚ್ಚಿನ ಕಾನೂನು ರೀತಿ ಕ್ರಮ ಜರುಗಿಸಲು ಪ್ರತಿ ಮತಗಟ್ಟೆಗೆ ಹೆಚ್ಚುವರಿ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಆರ್ಥಿಕ ದುರ್ಬಲ ವರ್ಗಗಳ ವಾಸ ಮಾಡುವ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರದ ಮೇಲೆ ನಿಗಾ ಇಡಲು ಪೊಲೀಸ್ ಗಸ್ತು, ನೀತಿ ಸಂಹಿತೆ ಜಾರಿ ತಂಡಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಕಳೆದ ವಿಧಾನಸಭೆ ಚುನಾವಣೆ ವೇಳೆ ನಡೆದ ಚುನಾವಣಾ ಅಕ್ರಮಗಳು ಅರ್ಜಿದಾರರು 2023ರ ಜುಲೈ 13ರಂದು ಬರೆದಿರುವ ಪತ್ರ ಆಧರಿಸಿ ಕ್ರಮ ಜರುಗಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಓದಿ: ಅತ್ಯಾಚಾರ ಮತ್ತು ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಮರು ನಿಗದಿಗೆ ಸೂಚಿಸಿದ ಹೈಕೋರ್ಟ್