ಬೆಂಗಳೂರು : ರಾಜ್ಯದಲ್ಲಿ ಚಳಿಗಾಲ ಮುಗಿದು ಬೇಸಿಗೆ ಶುರುವಾಗುತ್ತಿರುವ ಸಮಯದಲ್ಲೇ ಬಿಸಿಲು ಹೆಚ್ಚಾಗಿರುವುದು ಕಂಡುಬರುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ತಾಪಮಾನದಿಂದ ಜನರು ತತ್ತರಿಸುವಂತಾಗಿದೆ.
ರಾಜ್ಯದಲ್ಲಿ ಫೆಬ್ರವರಿ ಆರಂಭದಿಂದಲೇ ತಾಪಮಾನ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ರಣ ಬಿಸಿಲು ಜನರನ್ನು ಕಾಡಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ತಿಂಗಳ ಅಂತ್ಯದ ವೇಳೆಗೆ ತಾಪಮಾನ ಇನ್ನೂ ಹೆಚ್ಚಾಗಲಿದೆ.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತಾಪಮಾನವು ಗರಿಷ್ಠ ಮಟ್ಟವನ್ನು ತಲುಪಲಿದೆ. ಹವಾಮಾನ ಇಲಾಖೆ ಪ್ರಕಾರ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಲಿದೆ. ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ತಾಪಮಾನ ಹೆಚ್ಚಾಗಿದೆ. ಮಧ್ಯಾಹ್ನದ ನಂತರ ಜನರು ಹೊರಬರಲು ಪರದಾಡುತ್ತಿದ್ದಾರೆ. ಸೂರ್ಯ ಇನ್ನಷ್ಟು ಪ್ರಖರವಾಗಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಹ ತಾಪಮಾನ ಹೆಚ್ಚಾಗಿದೆ. ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ. ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.
ಎಲ್ ನಿನೋ ಎಫೆಕ್ಟ್ : ರಾಜಧಾನಿಯಲ್ಲಿ ಫೆಬ್ರವರಿಯಲ್ಲೇ ತಾಪಮಾನ ಮಾರ್ಚ್ ಏಪ್ರಿಲ್ ತಿಂಗಳಿನ ಅನುಭವ ನೀಡುತ್ತಿದೆ. ಎಲ್ ನಿನೋ ಚಂಡಮಾರುತ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಜಾಸ್ತಿಯಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಬೆಳಗ್ಗೆ ತುಸು ತಂಪು ವಾತಾವರಣವಿದ್ದರೂ, 10 ಗಂಟೆಯ ನಂತರ ಮೈ ಸುಡುವ ಅನುಭವವಾಗುತ್ತಿದೆ. ರಾಜ್ಯದ ಬಹುತೇಕ ಕಡೆ ಭಾನುವಾರ ಒಣ ಹವೆ ಮುಂದುವರಿದಿದ್ದು, ಮುಂದಿನ ಎರಡು ಮೂರು ದಿನ ಇದೇ ವಾತಾವರಣ ಇರಲಿದೆ ಎಂದು ತಿಳಿಸಿದ್ದಾರೆ.
ತಾಪಮಾನದಲ್ಲಿ ಗಮನಾರ್ಹ ಹೆಚ್ಚಳ : ಬೆಂಗಳೂರು ನಗರದ ಕೆಲವೆಡೆ ಇಂದು ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿತ್ತು. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. 3 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳವಾಗಿದೆ. ಶನಿವಾರದಂದು ಮಂಡ್ಯದಲ್ಲಿ ಕಡಿಮೆ ಉಷ್ಣಾಂಶ ಅಂದರೆ 14.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದಿದೆ.
''ಮಾರ್ಚ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ವಾತಾವರಣದಲ್ಲಿನ ಉಷ್ಣತೆ ಹೆಚ್ಚಾಗಿದ್ದು, ಮುಂದಿನ ತಿಂಗಳು ರಾಜ್ಯದಲ್ಲಿ ಕೂಡ ಅಕಾಲಿಕವಾಗಿ ಮಳೆಯಾಗುವ ಸಾಧ್ಯತೆಗಳಿವೆ'' ಎಂದು ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಕಳೆದ 12 ತಿಂಗಳಲ್ಲಿ ಅತಿ ಹೆಚ್ಚು ತಾಪಮಾನಕ್ಕೆ ಒಳಗಾದ ಭೂಮಿ