ಬೆಳಗಾವಿ: ಬೋರ್‌ವೆಲ್ ನೀರು ಸೇವಿಸಿ 41 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಇಂದು ನಡೆದಿದೆ.
ಚಚಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಹತ್ತಿರದ ಕೆಲ ಮನೆಗಳ ಹಲವರಿಗೆ ವಾಂತಿಭೇದಿ ಶುರುವಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಐವರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಈರವ್ವ ಗಾಳಿಮಠ (63) ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನುಳಿದವರನ್ನು ಚಚಡಿ ಮತ್ತು ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡು ಬಿಟ್ಟಿದ್ದು, ಗ್ರಾಮಸ್ಥರ ಸರಣಿ ತಪಾಸಣೆ ಮಾಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಕೂಡಾ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರ ಜೊತೆಗೆ ತುರ್ತು ಸಭೆ ನಡೆಸಿ, ಧೈರ್ಯ ತುಂಬಿದ್ದಾರೆ. ಸದ್ಯ ಅಸ್ವಸ್ಥಗೊಂಡಿರುವ ಜನರು ಸೇವಿಸಿರುವ ಬೋರ್‌ವೇಲ್ ನೀರನ್ನು ಆರೋಗ್ಯಾಧಿಕಾರಿಗಳು ಪ್ರಯೋಗಾಲಯಕ್ಕೆ ಪರೀಕ್ಷೆಗೆಂದು ಕಳುಹಿಸಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
'ಈಟಿವಿ ಭಾರತ' ಪ್ರತಿನಿಧಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಅವರನ್ನು ಸಂಪರ್ಕಿಸಿದಾಗ, ಕಲುಷಿತ ನೀರು ಸೇವನೆಯಿಂದ ಒಟ್ಟು 41 ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು, 21 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 20 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ, ಮನೆಗೆ ತೆರಳಿದ್ದಾರೆ. ಓರ್ವ ಮಹಿಳೆ ಬಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುದಿಸಿ, ಆರಿಸಿದ ನೀರು ಕುಡಿಯುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಿಜಯನಗರ: ಬೀಗರ ಊಟ ಮಾಡಿದ್ದ ಮಕ್ಕಳು ಸೇರಿ 96 ಜನರಿಗೆ ವಾಂತಿ-ಭೇದಿ, ಅಸ್ವಸ್ಥರು ಆಸ್ಪತ್ರೆಗೆ ದಾಖಲು - 96 people ill