ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಪ್ರಾಣಿಗಳ ರಕ್ಷಣೆಗೆ ಶ್ರಮಿಸುತ್ತಿರುವ ಪೆಟಾ ಸಂಘಟನೆ ಅರ್ಜಿ ಸಲ್ಲಿಸಿದೆ.
ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಪೆಟಾ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಇದಕ್ಕೆ ಪೀಠ ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ, ಇಷ್ಟು ವಿಳಂಬವೇಕೆ ಎಂದು ಪ್ರಶ್ನಿಸಿತು.
ಇದಕ್ಕೆ ವಕೀಲರು, ಜುಲೈನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಇನ್ನೂ ವಿಚಾರಣೆಗೆ ನಿಗದಿಪಡಿಸಿಲ್ಲ. ಈಗ ಅಕ್ಟೋಬರ್ 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದರು. ಬಳಿಕ ಪೀಠ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಗೊಳಿಸಿತು.
ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗಗಳಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಅದಕ್ಕೆ ಅನುಮತಿಸದಂತೆ ಪೆಟಾ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಅ.26ರಂದು ಕಂಬಳ ಋತು ಆರಂಭ, ಶಿವಮೊಗ್ಗದಲ್ಲಿ ಫೈನಲ್ ಸ್ಪರ್ಧೆ - Kambala Season