ಬೆಂಗಳೂರು: ಎಲ್ಲಾ ಬಗೆಯ ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರು ನಿವಾಸಿ ಎಸ್. ಗೌರಿಶಂಕರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಯ ಕುರಿತು ವಿವರಣೆ ನೀಡುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರೇ ಖುದ್ದು ವಾದ ಮಂಡಿಸಿ, ಎಲ್ಲ ಬಗೆಯ ಆಸ್ತಿಗಳ ನೋಂದಣಿಗೆ ಸರ್ಕಾರ ಇ-ಖಾತೆ ಕಡ್ಡಾಯಗೊಳಿಸಿದೆ. ಆದರೆ, ಬಿಬಿಎಂಪಿ ಈ ನಿಟ್ಟಿನಲ್ಲಿ ಸನ್ನದ್ಧವಾಗಿಲ್ಲ. ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇನ್ನೂ ಇ-ಖಾತಾ ಆಗಿಲ್ಲ. ಇದರಿಂದ ಆಸ್ತಿಗಳ ನೋಂದಣಿಯಲ್ಲಿ ಶೇ.60ರಷ್ಟು ಕುಸಿತವಾಗಿದೆ. ಅಲ್ಲದೇ ಆಸ್ತಿಗಳ ಕ್ರಯ-ವಿಕ್ರಯಕ್ಕೆ ಸಮಸ್ಯೆ ಆಗುತ್ತಿದೆ. ಬ್ಯಾಂಕುಗಳು ಸಾಲ ನೀಡುತ್ತಿಲ್ಲ. ಈ ವಿಚಾರವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಅಲ್ಲದೇ, ಎಲ್ಲ ಆಸ್ತಿಗಳಿಗೆ ಬಿಬಿಎಂಪಿ ಇ-ಖಾತಾ ಪೂರೈಸುವ ತನಕ ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸದಂತೆ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಮನವಿ ಮಾಡಿದರು.
ಇದನ್ನೂ ಓದಿ: ವರದಕ್ಷಿಣೆ, ಕೌಟುಂಬಿಕ ಹಿಂಸಾಚಾರ ಕಾಯ್ದೆಗಳ ಪರಿಶೀಲನೆಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ