ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸಿಬಿಐ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಮೃತ ವಿದ್ಯಾರ್ಥಿನಿಯ ತಂದೆಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ನ್ಯಾಯಪೀಠ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿತು.
ಅಲ್ಲದೆ, ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಭಾಗೀಯ ಪೀಠದಲ್ಲಿ ವಿಚಾರಣಾ ಹಂತದಲ್ಲಿದ್ದು, ಅದರೊಂದಿಗೆ ಪಟ್ಟಿ ಮಾಡುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಅಲ್ಲದೆ, ಪ್ರಕರಣದಿಂದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ, ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿದೆ. ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್ ರಾವ್ ಅವರನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.
ಪ್ರಕರಣದ ಹಿನ್ನೆಲೆ : 2012ರ ಅ. 9ರಂದು ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಎಂದು ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಅವರನ್ನ ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಸೆಷನ್ಸ್ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ತಿಳಿಸಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ 2023ರ ಜೂ. 16 ರಂದು ಆದೇಶಿಸಿತ್ತು. ಆ ಆದೇಶದಲ್ಲಿ ಪ್ರಾಸಿಕ್ಯೂಷನ್ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ಗೋಲ್ಡನ್ ಹವರ್ ಅಲ್ಲಿ ತನಿಖೆಯನ್ನು ಸಮರ್ಪಕವಾಗಿ ಮಾಡಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ಇದರಿಂದ ಇಡೀ ತನಿಖೆ ನ್ಯಾಯೋಚಿತವಾಗಿ ತನಿಖೆ ನಡೆಸಿಲ್ಲ ಎಂಬುದು ಸ್ಪಷ್ಟವಾಗಲಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ: ಎಕ್ಸ್ ಖಾತೆಗಳ ನಿರ್ಬಂಧ ಸಂಬಂಧದ ದಾಖಲೆಗಳನ್ನು ಅರ್ಜಿದಾರರಿಗೆ ನೀಡಲಾಗದು : ಕೇಂದ್ರ ಸರ್ಕಾರ