ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಬದಲಿ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆರೋಪವನ್ನು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸಿ ಆದೇಶಿಸಬೇಕೆಂದು ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಮಂಗಳವಾರ (ಇಂದು) ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ರಾಜ್ಯ ಗೃಹ ಸಚಿವಾಲಯ, ಗೃಹ ಇಲಾಖೆ, ಸಿಬಿಐ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ ಸೇರಿದಂತೆ ಒಟ್ಟು 12 ಮಂದಿಯನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಬಿ.ಎಂ.ಪಾರ್ವತಿ ಮುಡಾದಿಂದ 55.80 ಕೋಟಿ ರೂ ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಆದರೆ, ಸಿದ್ದರಾಮಯ್ಯ ರಾಜ್ಯದ ಹಾಲಿ ಮುಖ್ಯಮಂತ್ರಿಗಳಾಗಿದ್ದು, ರಾಜ್ಯದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ರಾಜ್ಯ ತನಿಖಾ ಸಂಸ್ಥೆಗಳ ಮೇಲೆ ಭಾರಿ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾ ಸಮನ್ಸ್