ಬೆಂಗಳೂರು: ರಾಜ್ಯದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಸಂಚಲನ ನಡೆಯಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಮೋದಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರದ ಚೊಕ್ಕನಹಳ್ಳಿ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೊಂಡು ಈ ಸಮಾವೇಶ ನಡೆಯಲಿದೆ, ಸುಮಾರು ಒಂದು 1 ಲಕ್ಷ ಜನರು ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ.
ಕೇಂದ್ರ ಸರ್ಕಾರದ ಸಾಧನೆ ಜೊತೆಗೆ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಪ್ರಸ್ತಾಪ ಮಾಡಲಿರುವ ಮೋದಿ, ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ವೇದಿಕೆಯಲ್ಲಿ ಈಗಾಗಲೇ ಭದ್ರತಾ ಸಿಬ್ಬಂದಿಯಿಂದ ತಪಾಸಣೆ ಕಾರ್ಯ ಪೂರ್ಣಗೊಂಡಿದ್ದು, ಸಮಾವೇಶಕ್ಕೆ ಬರುವ ಕಾರ್ಯಕರ್ತರ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ, ಮೋದಿ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಬಿಜೆಪಿ, ಜೆಡಿಎಸ್ ಸ್ಥಳೀಯ ನಾಯಕರು ವೇದಿಕೆ ಹಂಚಿಕೊಳ್ಳಲಿದ್ದಾರೆ.
ಚಿಕ್ಕಬಳ್ಳಾಪುರ ಸಮಾವೇಶ ನಂತರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೊಂಡು ನಡೆಯಲಿರುವ ಸಮಾವೇಶದಲ್ಲಿ ಜನತೆಯನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಸಮಾವೇಶದಲ್ಲಿ ಮೋದಿ ಜತೆ ಯಡಿಯೂರಪ್ಪ, ಬೆಂಗಳೂರಿನ ನಾಲ್ಕು ಲೋಕಸಭೆ ಅಭ್ಯರ್ಥಿಗಳು, ಬೆಂಗಳೂರು ಶಾಸಕರು, ಸಂಸದರು, ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಿದ್ದು, 1 ಲಕ್ಷಕ್ಕೂ ಅಧಿಕ ಜನ, ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿದ್ದು, ಮಹಿಳೆಯರಿಗೆ ಪಿಂಕ್ ಬಾಕ್ಸ್ ನಿರ್ಮಿಸಿ 5 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ವಿಐಪಿ ಪಾಸ್ಗಳ ವಿತರಣೆ ಕೂಡ ಮಾಡಲಾಗಿದೆ. 15 ಸಾವಿರ ವಿಐಪಿಗಳಿಗೆ ಪಾಸ್ ವ್ಯವಸ್ಥೆ ಮಾಡಿದ್ದು, ಈಗಾಗಲೇ ಕ್ಯೂಆರ್ ಕೋಡ್ ಮೂಲಕ 7.5 ಸಾವಿರ ವಿಐಪಿಗಳಿಂದ ಪಾಸ್ ಸ್ವೀಕಾರ ಮಾಡಿದ್ದಾರೆ. ಸಮಾವೇಶದ ಆವರಣದಲ್ಲಿ 200 ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನೂ ಓದಿ: ರಾಜಧಾನಿಗೆ ಮೋದಿ ಆಗಮನ: ಭಾರಿ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸವಾರರಿಗೆ ಬದಲಿ ಮಾರ್ಗ - Modi Visit Bengaluru