ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯರ ತಾಯಿ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೊಲೀಸರು ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಮತ್ತು ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಈ ಮೊದಲಿನ ಪೋಕ್ಸೋ ಕಾಯ್ದೆ ಆರೋಪಗಳ ದೂರಿನಲ್ಲೂ ಇದೇ ರೀತಿಯ ಅಪರಾಧಿಕ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತದನಂತರ ಮಠದ ಅಡುಗೆ ಕೆಲಸದ ಮಹಿಳೆ ನೀಡಿದ ಹೇಳಿಕೆ ಆಧರಿಸಿ ಇಂತಹುದೇ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಇದೀಗ ಮತ್ತೆ ಅದೇ ಸಾಕ್ಷಿ ಮತ್ತು ದೂರಿನ ಅಂಶಗಳ ಮೇಲೆ ಅರ್ಜಿದಾರರನ್ನು ಬಂಧಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಫಿರ್ಯಾದುದಾರರು ಮನವಿ ಮಾಡಿದ್ದಾರೆ. ಈ ಮೊದಲಿನ ಪ್ರಕರಣದಲ್ಲಿ ಈಗಾಗಲೇ 13 ಸಾಕ್ಷಿಗಳ ವಿಚಾರಣೆ ಮುಗಿದಿರುವ ಕಾರಣ ಅರ್ಜಿದಾರರು ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಸರ್ಕಾರಿ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಕೆಗೆ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲದೆ ಇತರೆ ಮಕ್ಕಳ ಮೇಲೂ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಠದಲ್ಲಿನ ಅಡುಗೆ ಕೆಲಸದ ಮಹಿಳೆ ದೂರಿನಲ್ಲಿ ಆರೋಪಿಸಿದ್ದರು. ಜೊತೆಗೆ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯರ ತಾಯಿ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಚಿತ್ರದುರ್ಗದ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು. ದೂರಿಗೆ ಸಂಬಂಧಿಸಿದಂತೆ ಐಒಇಸಿ, ಪೋಕ್ಸೋ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಹಾಗೂ ಬಾಲನ್ಯಾಯ (ಮಕ್ಕಳ ಕಾಳಜಿ ಮತ್ತು ಸಂರಕ್ಷಣೆ) ಕಾಯ್ದೆ 2015ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಜಾಮೀನಿನ ಮೇಲೆ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ