ಬೆಂಗಳೂರು: ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದ ಕಡೆ ಮುಖ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರು ಆಖಾಡಕ್ಕಿಳಿದಿದ್ದಾರೆ.
ಭಾನುವಾರ ಕುಂದಾನಗರಿ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಇನ್ನೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾನುವಾರವೇ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ನಡೆಸುವುದರಿಂದ ಮಾತಿನ ವಾಗ್ಬಾಣಗಳು ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಅದರಲ್ಲೂ ಈ ಕ್ಷೇತ್ರಗಳ ಪೈಕಿ ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಹಾವೇರಿ ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರಗಳಾಗಿವೆ. ಬೆಳಗಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಕಣದಲ್ಲಿದ್ದರೆ, ಚಿಕ್ಕೋಡಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಅಖಾಡದಲ್ಲಿದ್ದಾರೆ. ಅಲ್ಲದೆ ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆ ಪುತ್ರ ಅಖಾಡಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಘಟನುಘಟಿ ನಾಯಕರು ಈ ಕ್ಷೇತ್ರಗಳ ಕಡೆ ಬರುತ್ತಿದ್ದಾರೆ. ಇನ್ನು ಬಿಜೆಪಿಗೂ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ.
ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಬಂಡಾಯ ಸಾರಿದ್ದಾರೆ. ಬಿ.ವೈ. ರಾಘವೇಂದ್ರ ವಿರುದ್ಧ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಈ ಕ್ಷೇತ್ರದತ್ತ ನೆಟ್ಟಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆಯಿಂದಲೇ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕೂಡಾ ಈ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೂ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. ಇನ್ನುಳಿದಿರುವ 9 ದಿನಗಳ ಕಾಲ ಅವರು ಕಲ್ಯಾಣ ಕರ್ನಾಟಕ, ಉತ್ತರ ಕನ್ನಡ ಹಾಗೂ ಮಲೆನಾಡಿನ ಈ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆ ಆದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ.
ಇಂದು ಗೋವಾದಿಂದ ಪ್ರಚಾರ ಮುಗಿಸಿಕೊಂಡು ಸಂಜೆ ಬೆಳಗಾವಿಗೆ ಆಗಮಿಸುವ ಪ್ರಧಾನಿ ಮೋದಿ ಅವರು ರಾತ್ರಿ ಅಲ್ಲೇ ಖಾಸಗಿ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಲಿದ್ದು, ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ನಾಳೆಯೇ ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಕಣದಲ್ಲಿರುವ ದಿಗ್ಗಜರು: ಇನ್ನು ಎರಡನೇ ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಹಾಗೂ ಕಾಂಗ್ರೆಸ್ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞ ವಿನಯ್‌ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಾವಣಗೆರೆಯಲ್ಲಿ ಬಿಟ್ಟರೆ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಇಬ್ಬರೂ ಕುರುಬ ಸಮುದಾಯದವರಾಗಿದ್ದಾರೆ. ತಮ್ಮ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಹಿನ್ನೆಲೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆ.
ಕೆ.ಎಸ್. ಈಶ್ವರಪ್ಪ, ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ವಿನಯ್‌ಕುಮಾರ್, ಶಾಮನೂರು ಶಿವಶಂಕರಪ್ಪ ಸೊಸೆ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ, ಸಿದ್ದೇಶ್ವರ್ ಪತ್ನಿ, ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್, ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಬೀದರ್‌ನಲ್ಲಿ ಭಗವಂತ ಖೂಬಾ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಧಾರವಾಡದಲ್ಲಿ ಆನಂದ ಅಸೂಟಿ ಅವರು ಪ್ರಲ್ಹಾದ್ ಜೋಶಿ ವಿರುದ್ಧ ಕಣಕ್ಕಿಳಿದಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡದ 14 ಸ್ಥಾನಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ರಂಗೇರಿದ ಲೋಕಸಭಾ ಚುನಾವಣಾ ಕಣ: ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ - Lok Sabha Election