ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್: ಮುಂದಿನ 24 ಗಂಟೆ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗೆ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯಲ್ಲಿ ಸಾಧಾರಣ ಮಳೆ: ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೆಳಗಾವಿ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 24 ಗಂಟೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ದಾಖಲಾಗಲಿದೆ.
ಗೋವಾ ಮತ್ತು ಉತ್ತರ ಕರ್ನಾಟಕದ ಕರಾವಳಿ ಬಳಿಯ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ನಿರ್ಮಾಣವಾಗಿದ್ದು, ಅದು ಮಹಾರಾಷ್ಟ್ರ ಕರಾವಳಿಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಸಾಗಲಿದೆ. ಅಕ್ಟೋಬರ್ 13 ರ ಬೆಳಗ್ಗೆ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಳ್ಳಲಿದೆ. ದಕ್ಷಿಣ ಕೇರಳ ಕರಾವಳಿಯಿಂದ ಆಗ್ನೇಯ ಅರೇಬಿಯನ್ ಸಮುದ್ರದವರೆಗೆ ಟ್ರಫ್ ಸಾಗಲಿದೆ. ಇನ್ನು ತಮಿಳುನಾಡು ಕರಾವಳಿಯಿಂದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಮೊತ್ತೊಂದು ಚಂಡಮಾರುತದ ಪರಿಚಲನೆಯಿದ್ದು, ದಕ್ಷಿಣ ತಮಿಳುನಾಡು ಕರಾವಳಿಯ ಮೇಲೆ ನೆಲೆಗೊಂಡಿದೆ ಮತ್ತು ಅದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿದೆ. ಈ ಹಿನ್ನೆಲೆಯಲ್ಲಿ ಹಿಂಗಾರು ಮಳೆ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ನಿನ್ನೆಯಿಂದ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ ಅತಿ ಹೆಚ್ಚು 9 ಸೆಮೀ ಮಳೆ ದಾಖಲಾಗಿದೆ. ಉಳಿದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 7 ಸೆಮೀ ಮಳೆ ಸುರಿದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಹಾವೇರಿ: ಸತತ ಮಳೆಗೆ ಬ್ಯಾರೇಜ್ ಮುಳುಗಡೆ, ನೀರಿನಲ್ಲಿ ತೇಲಿ ಹೋದ ಕುಂಬಳಕಾಯಿ!