ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಕರ್ನಾಟಕ ರಾಷ್ಟ್ರ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಪ್ರಕರಣ ಸಂಬಂಧ ಈಗಾಗಲೇ ಪಕ್ಷದ ವತಿಯಿಂದ ಹೊಳೆನರಸೀಪುರದಲ್ಲಿ ಅರ್ಜಿದಾರರು ದೂರು ಸಲ್ಲಿಸಿದ್ದು, ದೂರಿಗೆ ಸಂಬಂಧಿಸಿದಂತೆ ಸ್ವೀಕೃತಿ ಪತ್ರ ನೀಡಲಾಗಿದೆ. ಆದರೆ, ಎಫ್‌ಐಆರ್ ದಾಖಲಿಸಿಲ್ಲ. ಆದ್ದರಿಂದ ಎಫ್‌ಐಆರ್ ದಾಖಲಿಸಬೇಕು. ವಿಡಿಯೋ ಮಾಡಿರುವವರು ಮತ್ತು ವಿಡಿಯೋವನ್ನು ಇತರರಿಗೆ ಹಂಚಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ, ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆ ಸೇರಿದಂತೆ ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ವಹಿಸಬೇಕು ಎಂದು ಕೋರಿದ್ದರು.
ಮಂಗಳವಾರ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ರಜಾ ಕಾಲದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅಲ್ಲದೆ, ಪ್ರಕರಣ ಸಂಬಂಧ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದೆ. ಹಾಗಾಗಿ ಈ ಹಂತದಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ.ಆರ್. ಮೋಹನ್, ಪ್ರಕರಣ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದೂರು ದಾಖಲಿಸಿತ್ತು. ದೂರು ದಾಖಲಾಗಿದ್ದು, ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹೊಳೆನರಸೀಪುರ ಪೊಲೀಸರು ಹಿಂಬರಹ ಕೊಟ್ಟಿದ್ದರು. ಆ ಹಿಂಬರಹ ರದ್ದುಪಡಿಸಿ ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ಓದಿ: ಪರಿಷತ್ ಚುನಾವಣೆ: ಪಕ್ಷೇತರರಾಗಿ ಸ್ಪರ್ಧಿಸಲು ರಘುಪತಿ ಭಟ್ ನಿರ್ಧಾರ - Raghupathi Bhat