ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ಸೂಟ್ ಹೊಲಿಸಿ ಲಾಂಚ್ ಮಾಡುತ್ತಾರೆ. ಹೀಗೆ ಪ್ರತೀ ಸಾರಿ ಲಾಂಚ್ ಮಾಡಿದಾಗಲೂ ಕಾಂಗ್ರೆಸ್ ವಿಫಲವಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇನ್ನು, ಸಚಿವ ಪ್ರಿಯಾಂಕ್ ಖರ್ಗೆ ಅವರು ನರೇಂದ್ರ ಮೋದಿ ಪ್ರಧಾನಿ ಮಂತ್ರಿಯಲ್ಲ, ಪ್ರಚಾರ ಮಂತ್ರಿ ಎಂದು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿ, ಕೇವಲ ಪ್ರಚಾರದ ತೆವಲಿಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯವರ ಅಧ್ಯಕ್ಷತೆಯ ಕಾಂಗ್ರೆಸ್ ಪಕ್ಷ ಇದೀಗ ಯಾವ ಸ್ಥಿತಿಯಲ್ಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು ಎಂದು ಸಲಹೆ ನೀಡಿದರು.
ನಾನು ಸ್ಟಾರ್ ಪ್ರಚಾರಕ. ನನ್ನನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ಉಪಯೋಗಿಸಿಕೊಳ್ಳುತ್ತಿಲ್ಲ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ, ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಎಲ್ಲವೂ ಸರಿಯಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವಂಥದ್ದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಒಳಜಗಳವಿದೆ. ಹಾಗಾಗಿ ಇಂತಹ ಹೇಳಿಕೆಗಳು ಆ ಪಕ್ಷದಲ್ಲಿ ಮೊದಲಿನಿಂದಲೂ ಕೇಳಿಬರುತ್ತಿವೆ. ಇದರ ಕುರಿತು ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.
ಏ.15ರಂದು ಜೋಶಿ ನಾಮಪತ್ರ ಸಲ್ಲಿಕೆ: ಏ.15ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತೇನೆ. ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಅತಿದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಮೂರನೇ ಹಂತದ ಚುನಾವಣೆಯ ಪ್ರಚಾರಕ್ಕೆ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: 'ನಾನು ಹಿಟ್ಲರ್ ಆಗಿದ್ದರೆ ವಿನಯ್ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಗೆಲ್ಲಲಾಗುತ್ತಿತ್ತೇ?' - Prahlad Joshi