ಬೆಂಗಳೂರು: ಮಳೆಗಾಲ ಅಂದ್ರೆ ಸಂತಸದ ಜೊತೆಗೆ ಆತಂಕವೂ ಹೌದು. ಮಳೆಗಾಲದಲ್ಲಿ ಕಾಯಿಲೆಗಳು ಅಧಿಕವೆಂಬುದೇ ಇದಕ್ಕೆ ಕಾರಣ. ಇದರಲ್ಲಿ ಪ್ರಮುಖವಾಗಿ ಡೆಂಗ್ಯೂ ಜ್ವರ. ರಾಜ್ಯದಲ್ಲಿ ದಿನದಿನಕ್ಕೆ ಪ್ರಕರಣಗಳು ಹೆಚ್ಚುತ್ತಿವೆ.
ಡೆಂಗ್ಯೂ ಎಂದರೇನು?, ಹೇಗೆ ಹರಡುತ್ತದೆ?: ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುತ್ತದೆ. ಇದು ಸೋಂಕು ಹೊಂದಿದ ಈಡಿಸ್ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದ ಡೆಂಗ್ಯೂ ಹರಡುತ್ತದೆ.
ರೋಗದ ಮುಖ್ಯ ಲಕ್ಷಣಗಳೇನು?: ಡೆಂಗ್ಯೂ ಜ್ವರ ಬಂದಾಗ ದೇಹದಲ್ಲಿ ಕೆಲವು ಬದಲಾವಣೆ ಕಂಡು ಬರುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳು ಕೆಂಪಾಗುವುದು, ಮೈ-ಕೈಗಳ ಮೇಲೆ ದದ್ದು ಕಾಣಿಸುವುದು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ರೋಗದ ಪ್ರಮುಖ ಲಕ್ಷಣಗಳೆಂದರೆ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.
ಡೆಂಗ್ಯೂ ನಿಯಂತ್ರಣ ಹೇಗೆ?: ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಡುತ್ತದೆ. ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ಶೇಖರಣೆ ಆಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈಯರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.
ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಹೇಗೆ?: ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿ ಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬಹುದು.
ಡೆಂಗ್ಯೂ ರೋಗ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಸಮೀಪದ ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರದಲ್ಲಿ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಡೆಂಗ್ಯೂ ರೋಗ ಕೆಲವೇ ಪ್ರಕರಣದಲ್ಲಿ ತೀವ್ರ ರಕ್ತಸ್ರಾವವಾದಲ್ಲಿ ರಕ್ತದ ಒತ್ತಡ ಕಡಿಮೆ ಆದಲ್ಲಿ ಐವಿ ದ್ರಾವಣ, ಪ್ಲೇಟೆಟ್ ನೀಡಬೇಕಾಗಬಹುದು. ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು.
"ನೀರು ನಿಲ್ಲದಂತೆ ಎಚ್ಚರ ವಹಿಸಿ, ಈಡಿಸ್ ಸೊಳ್ಳೆಗಳ ಲಾರ್ವಾವನ್ನು ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನು ಗುರುತಿಸಿ ಅಲ್ಲಿಯ ನಿವಾಸಿಗಳಿಗೆ ಜಾಗೃತಿ ಮೂಡಿಸಬೇಕು" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.