ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಯಾವುದೇ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯು 2017-18 ರಲ್ಲಿ ಪ್ರಾರಂಭವಾಗಿದ್ದು, ಈ ಯೋಜನೆಯಡಿ 991 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾಗಿರುವ ಗ್ರಾಮಗಳಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೊಂದು ಕಾಮಗಾರಿಗಳು ಜಮೀನಿನ ವಿವಾದ, ಕಾಮಗಾರಿಗಳ ಬದಲಾವಣೆ, ಸಾರ್ವಜನಿಕ ವಿರೋಧದಿಂದ ವಿಳಂಬವಾಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 26 ಗ್ರಾಮಗಳು ಆಯ್ಕೆಯಾಗಿದ್ದು, 330 ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದೆ. 294 ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ 36 ಕಾಮಗಾರಿಗಳು ಬಾಕಿ ಇದ್ದು, ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.
ಆಯಾ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಆಯಾ ಇಲಾಖೆಯಲ್ಲೇ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಇದಕ್ಕೂ ಮುನ್ನ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ, 6 ವರ್ಷವಾದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಹಣ ಹಾಗೂ ಸಿಬ್ಬಂದಿ ಸಮಸ್ಯೆ ಇದೆ ಎಂದು ಸದನದ ಗಮನ ಸೆಳೆದರು.