ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಜೈಕಾರ ಕೂಗಿದ ಪ್ರಕರಣ ಸಂಬಂಧ ತನಿಖೆ ಮುಕ್ತಾಯದ ಹಂತದಲ್ಲಿದ್ದು, ಇದಕ್ಕೂ ಮುನ್ನ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರಿಗೆ ನೋಟಿಸ್ ನೀಡಿ ಹೇಳಿಕೆ ದಾಖಲಿಸಿಕೊಳ್ಳಲು ಪೊಲೀಸರು ಚಿಂತನೆ ನಡೆಸಿದ್ದಾರೆ. ನಂತರ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆ.27ರಂದು ನಡೆದಿದ್ದ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪರವಾಗಿ ಅವರ ಹಿಂಬಾಲಕರು ವಿಧಾನಸೌಧದ ಆವರಣದಲ್ಲಿ ಜೈಕಾರ ಕೂಗುವಾಗ ಮೂವರು ಆರೋಪಿಗಳು ಪಾಕ್ ಪರ ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ದೆಹಲಿಯ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಹಾಗೂ ಬೆಂಗಳೂರಿನ ಡಿ.ಎಸ್.ಮುನಾವರ್ ಅಹ್ಮದ್ ಅವರನ್ನು ಬಂಧಿಸಲಾಗಿತ್ತು. ಮಾ.14ರಂದು 39ನೇ ಎಸಿಎಂಎಂ ನ್ಯಾಯಾಲಯವು ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು.
ವಿವಾದಿತ ಘೋಷಣೆಗಳ ಬಗ್ಗೆ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರವಾಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಡಿಯೋ ಮಾದರಿಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಾಯೋಗಾಲಯಕ್ಕೆ ಕಳುಹಿಸಿದ್ದರು. ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಸ್ಪಷ್ಟ ಎಂದು ಕಂಡು ಬಂದಿದ್ದರಿಂದ ಮೂವರನ್ನು ಬಂಧಿಸಲಾಗಿತ್ತು.
ರಾಜ್ಯಸಭಾ ಸದಸ್ಯರಿಗೆ ನೊಟೀಸ್ ನೀಡಲು ಚಿಂತನೆ: ಇದೀಗ ಚುನಾವಣೆಯಲ್ಲಿ ವಿಜೇತರಾಗಿದ್ದ ಸಂಸದ ನಾಸೀರ್ ಹುಸೇನ್ ಅವರಿಗೆ ಪ್ರಕರಣ ಸಂಬಂಧ ನೊಟೀಸ್ ನೀಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡು ಶೀಘ್ರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದಾಗಿ ಪೊಲೀಸ್ ಮೂಲಗಳು ಹೇಳಿವೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಬ್ಲೂ ಪ್ರಿಂಟ್ ರಚಿಸಿಕೊಡಲು ಲೋಕೋಪಯೋಗಿ ಇಲಾಖೆಗೆ ಪತ್ರ