ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ನಿಮಿತ್ತ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತರ ಘಟಣೆಗಳು ನಡೆಯುವ ಸಂಭವನೀಯತೆಗಳಿವೆ. ಇದನ್ನು ತಡೆಗಟ್ಟುವುದು ಹಾಗೂ ಮತ ಎಣಿಕೆ ಪಾವಿತ್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯ ಸಂಹಿತೆ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮರೆವಣಿಗೆ ಹಾಗೂ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಅವರ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ಬಳಸುವಂತಿಲ್ಲ. ಈ ಪ್ರದೇಶದಲ್ಲಿ ಬರುವಂತಹ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಬುಕ್ ಸ್ಟಾಲ್ಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು ಕ್ಷಾರಪದಾರ್ಥ, ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು. ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ನಗರ ಜಿಲ್ಲೆಯಾದ್ಯಂತ ಮದ್ಯ ನಿಷೇಧ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ -10(ಬಿ) ಅನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ರಂತೆ ಅಧಿಕಾರವನ್ನು ಚಲಾಯಿಸಿ ಮತ ಎಣಿಕೆ ಪ್ರಯುಕ್ತ, ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಎಲ್ಲಾ ವಿಧದ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಶುಷ್ಕ ದಿನಗಳೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲಿ ಅಪಾಯಕಾರಿ ವಸ್ತುಗಳ ನಿಷೇಧ: ಡಾ. ಬಿ.ಆರ್. ಅಂಬೇಡ್ಕರ್ ವೀದಿಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ಅಧಿಕಾರಿ/ ನೌಕರರು ಹಾಗೂ ಅಭ್ಯರ್ಥಿಗಳು/ ಚುನಾವಣಾ ಏಜೆಂಟರು/ ಮತ ಎಣಿಕೆ ಏಜೆಂಟರುಗಳು ಯಾವುದೇ ರೀತಿಯ ಪೆನ್, ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಯಾವುದೇ ಕ್ಯಾಮೆರಾ, ಯಾವುದೇ ದ್ರವ/ ವಾಯುದ್ರವ ಪದಾರ್ಥಗಳು, ದಹ್ಯ ವಸ್ತುಗಳು, ಸಿಡಿಮದ್ದುಗಳು/ ಪಟಾಕಿಗಳು, ಸ್ಪೋಟಕಗಳು, ಆಹಾರ ವಸ್ತುಗಳು, ಯಾವುದೇ ವಿಧದ ಆಯುಧಗಳನ್ನು ಮತ ಎಣಿಕೆ ಕೇಂದ್ರದ ಒಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ವಿಭಾಗದ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಆಡಳಿತ ಮಂಡಳಿಗೆ ಚುನಾವಣೆ: ಎ ಎಂ ಹಿಂಡಸಗೇರಿ ಬಣಕ್ಕೆ ಭರ್ಜರಿ ಜಯ