ಕೊಪ್ಪಳ: ಮೋದಿ ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಬೇಕು ಎಂಬ ಹೇಳಿಕೆ ನೀಡಿದ ವಿಷಯವಾಗಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚಿಗೆ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದಡಿ ಸಚಿವ ತಂಗಡಗಿ ವಿರುದ್ಧ ಫ್ಲೈಯಿಂಗ್ ಸ್ಕ್ವಾಡ್ನ ಗ್ಯಾನನಗೌಡ ಅವರು ದೂರು ನೀಡಿದ್ದಾರೆ.
''ಸಚಿವ ಶಿವರಾಜ್ ತಂಗಡಗಿ ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು'' ಎಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಗ್ಯಾನನಗೌಡ ನಂದನಗೌಡ ನೀಡಿದ ದೂರಿನ ಅನ್ವಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರಿಂದ ಶಿವರಾಜ್ ತಂಗಡಗಿ ವಿರುದ್ಧ ಪ್ರತಿಭಟನೆ: ಮೋದಿ ಮೋದಿ ಎಂದು ಹೇಳುವವರಿಗೆ ಕಪಾಳಕ್ಕೆ ಹೊಡೆಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರಿಂದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕಾರಟಗಿಯಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕಾರಟಗಿಯ ನವಲಿ ಸರ್ಕಲ್ ನಿಂದ ಆರಂಭವಾದ ಪ್ರತಿಭಟನಾ ಮರವಣಿಗೆ ಸಚಿವ ಶಿವರಾಜ್ ತಂಗಡಗಿ ನಿವಾಸದವರೆಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ಮೋದಿ ಮೋದಿ ಎಂಬ ಘೋಷಣೆಯ ಕೂಗು ಸಹ ಕೇಳಿಬಂತು.
ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ: ವಿದ್ಯಾರ್ಥಿಗಳು ಮತ್ತು ಯುವಕರು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು ಎಂಬ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿರುವ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಿಯೋಗವು ಬೆಂಗಳೂರಿನ ಚುನಾವಣಾ ಆಯೋಗದ ಕಚೇರಿಗೆ ದೂರು ನೀಡಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಸೇರಿದಂತೆ ಪ್ರಮುಖರು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ ದೂರು ಕೊಟ್ಟಿದ್ದಾರೆ.
ಇದನ್ನೂ ಓದಿ: 'ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು' ಎಂದ ತಂಗಡಗಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು - BJP Complaint