ಬೆಂಗಳೂರು : ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಿ ಎಸ್ ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಫೆಬ್ರವರಿ 24 ರಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು 2015 ರಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರು ಕೇವಲ 24 ದಿನಗಳ ಕಾಲ ಮುಖ್ಯ ನ್ಯಾಯಮೂರ್ತಿ ಆಗಿರಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅತಿ ಕಡಿಮೆ ಅವಧಿಗೆ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿದ ಜಸ್ಟೀಸ್ ಆಗಿದ್ದಾರೆ.
ಕೇಂದ್ರ ಸರ್ಕಾರವು ಜನವರಿ 24 ರಂದು ದಿನೇಶ್ ಕುಮಾರ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಅಧಿಸೂಚನೆ ಪ್ರಕಟಿಸಿತ್ತು. ಇದೀಗ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ದಿನೇಶ್ ಕುಮಾರ್ ಅವರು, ಪ್ರಾಮಾಣಿಕತೆ ಮತ್ತು ಸಾಮರ್ಥ್ಯಗಳಿಂದ ಗಮನ ಸೆಳೆದವರಾಗಿದ್ದಾರೆ. ನೇಮಕ ಆದಾಗಿನಿಂದ ಕರ್ನಾಟಕ ಹೈಕೋರ್ಟ್ನಲ್ಲಿ ಮಹತ್ತರ ಸೇವೆ ಸಲ್ಲಿಸಿದ್ದಾರೆ ಎಂದು ಕೊಲಿಜಿಯಂ ತಿಳಿಸಿತ್ತು.
ಇದನ್ನೂ ಓದಿ: ವಿಚ್ಛೇದನ ಪ್ರಕರಣಗಳಲ್ಲಿ ಪತಿಯ ಆದಾಯದ ಶೇ.10ರಷ್ಟನ್ನು ಪತ್ನಿಗೆ ಜೀವನಾಂಶ ನೀಡಿದರೆ ಹೆಚ್ಚಾಗುವುದಿಲ್ಲ : ಹೈಕೋರ್ಟ್
ಈ ಹಿಂದೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ ದಿನೇಶ್ ಕುಮಾರ್ ಅವರನ್ನು ಹಂಗಾಮಿ ಸಿಜೆ ಆಗಿ ನೇಮಕ ಮಾಡಿತ್ತು. ಇದೀಗ ಕೊಲಿಜಿಯಂ ಶಿಫಾರಸಿನಂತೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.