ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಕೊಂಚ ತಗ್ಗಿದಂತೆ ಕಂಡು ಬಂದರೂ ಹವಾಮಾನ ಇಲಾಖೆ ಅಲ್ಲಿನ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಮತ್ತು ಮೂರು ದಿನ ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡಕ್ಕೆ ಇಂದು ಮತ್ತು ನಾಳೆ ಆರೆಂಜ್ ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ ಜಿಲ್ಲೆಗೆ ನಾಲ್ಕು ದಿನ ಮತ್ತು ದಕ್ಷಿಣ ಕನ್ನಡಕ್ಕೆ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಇಂದು ಆರೆಂಜ್ ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲ್ಗೆ ಮೂರು ದಿನ ಮತ್ತು ಬಾಗಲಕೋಟೆಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ತಲುಪಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆ ಜೊತೆ ನಿರಂತರ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಮೋಡ ಕವಿದ ಆಕಾಶ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಮತ್ತು 21 ಡಿಗ್ರಿ ಆಗಿರಲಿದೆ ಎಂದು ಹವಾಮಾನ ಹೇಳಿದೆ.
ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್-ಶೋರ್ ಟ್ರಫ್ ಈಗ ದಕ್ಷಿಣ ಗುಜರಾತ್-ಉತ್ತರ ಕೇರಳ ಕರಾವಳಿಯ ಉದ್ದಕ್ಕೂ ಸಾಗುತ್ತಿದೆ. ಆದ್ದರಿಂದ ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಇದರ ಪರಿಣಾಮ ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕದ ಮೇಲೆ ಸಕ್ರಿಯವಾಗಿದ್ದು, ಕರ್ನಾಟಕದ ಒಳಭಾಗದಲ್ಲಿ ಸಾಮಾನ್ಯವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ನಿನ್ನೆಯಿಂದ ಅತಿ ಹೆಚ್ಚು ಮಳೆ 15 ಸೆಂ.ಮೀ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಗೇಸೊಪ್ಪ 13 ಸೆಂ.ಮೀ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 12 ಸೆಂ.ಮೀ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಾಜ್ಯದ ಜಲಾಶಯಗಳಲ್ಲಿರುವ ಇಂದಿನ ನೀರಿನ ಮಟ್ಟದ ವಿವರ