ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 28ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಚಾಮರಾಜನಗರ, ರಾಮನಗರ, ವಿಜಯನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ 19 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 31ಕ್ಕೆ ಕೊನೆಗೊಳ್ಳಲಿದೆ ಹಿಂಗಾರು: ರಾಜ್ಯದಲ್ಲಿ ಹಿಂಗಾರು ಮುಗಿಯಲು ಇನ್ನೂ ಕೆಲ ದಿನಗಳು ಬಾಕಿ ಇದೆ. ಅಕ್ಟೋಬರ್ 1ರಿಂದ ಶುರುವಾದ ಹಿಂಗಾರು ಡಿಸೆಂಬರ್ 31ಕ್ಕೆ ಕೊನೆಗೊಳ್ಳಲಿದೆ. ಈ ಬಾರಿ ಹಿಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ಅಕ್ಟೋಬರ್ 1ರಿಂದ ಡಿಸೆಂಬರ್ 25ರ ವರೆಗೆ ರಾಜ್ಯದಲ್ಲಿ ವಾಡಿಕೆಯಂತೆ 180 ಮಿಮೀ ಮಳೆಯಾಗಬೇಕಿತ್ತು. ಆದರೆ, 236 ಮಿ.ಮೀ. ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜೊತೆಗೆ ಕರ್ನಾಟಕದಲ್ಲೂ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ರಾಜಧಾನಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ: ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಹೆಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಜಧಾನಿ ಬೆಂಗಳೂರಿನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: ನಿದ್ರೆಯಲ್ಲೂ ಬೆವರುತ್ತಿದ್ದರೆ ತಡಮಾಡದೆ ಆಸ್ಪತ್ರೆಗೆ ಹೋಗೋದು ಒಳ್ಳೆಯದು: ವೈದ್ಯರ ಸಲಹೆ