ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು, ಹವಾಮಾನ ಇಲಾಖೆ ಭಾನುವಾರ ರಾಜ್ಯದ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಮತ್ತು ನಾಳೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯ ಸಂಭವವಿದೆ. ಇನ್ನು ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಲಘು ಅಥವಾ ಸಾಧಾರಣ ಮಳೆಯಾಗಲಿದೆ. ಗರಿಷ್ಠ ತಾಪಮಾನ 2 ರಿಂದ 4 ಡಿಗ್ರಿ ಕಡಿಮೆಯಾಗಲಿದೆ ಎಂದಿದೆ.
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿಗ್ರಿ ಮತ್ತು 24 ಡಿಗ್ರಿ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್. ಪುವಿಯರಸನ್ ಮತನಾಡಿ, "ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮೇ 12ರಿಂದ ಮೇ 16ರ ವೆರೆಗೆ ವ್ಯಾಪಕ ಮಳೆಯಾಗಲಿದೆ. ಮೇ 17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ. ಮೇ 16 ರಂದು ಮತ್ತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 12ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮತ್ತು ಮೇ 13 ಮತ್ತು 14ರಂದು ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಂದು ವಾರ ಸಾಧಾರಣ ಮಳೆಯಾಗಲಿದೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಅಬ್ಬರಿಸಿದ ವರುಣ: ರೈತಾಪಿ ವರ್ಗದಲ್ಲಿ ಮನೆ ಮಾಡಿದ ಸಂತಸ - Heavy Rain