ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕು ಪಡೆದಿದ್ದು ಅಲ್ಲಿಲ್ಲಿ ಮಳೆಯ ಸಿಂಚನ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಗುರುವಾರ) ಮತ್ತು ನಾಡಿದ್ದು (ಶುಕ್ರವಾರ) ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಶುಕ್ರವಾರ ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ; ನಾಳೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಹ ವರುಣನ ಅಬ್ಬರ ಕಂಡುಬರಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾದರೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಒಂದು ಚಂಡಮಾರುತದ ಪರಿಚಲನೆಯು ಮನ್ನಾರ್ ಕೊಲ್ಲಿಯಲ್ಲಿದ್ದು ಸರಾಸರಿ ಸಮುದ್ರ ಮಟ್ಟದಿಂದ 2.1 ಕಿಲೋ ಮೀಟರ್ ಎತ್ತರದಲ್ಲಿದೆ. ಮತ್ತೊಂದು ವಾಯು ಚಂಡಮಾರುತದ ಪರಿಚಲನೆಯು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಿಂದ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಇದ್ದು ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿಲೋ ಮೀಟರ್ ನಡುವೆ ಚಲಿಸುತ್ತಿದೆ. ಇದರಿಂದ ಮತ್ತೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್. ಪುವಿಯರಸನ್ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದ 16 ಜಿಲ್ಲೆಗಳಲ್ಲಿ ಅತ್ಯಧಿಕ ಹಿಂಗಾರು ಮಳೆ: ಅಕ್ಟೋಬರ್ - ಡಿಸೆಂಬರ್ನಲ್ಲಿ ವಾಡಿಕೆಗಿಂತ ಅತಿಹೆಚ್ಚು ಮಳೆ ಸಾಧ್ಯತೆ