ಉಡುಪಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗದ್ದೆ, ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಹಲವೆಡೆ ಪ್ರವಾಹದ ಭೀತಿ ಶುರುವಾಗಿದೆ. ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ.
ಉತ್ತರ ಕನ್ನಡದಲ್ಲೂ ರಜೆ ಘೋಷಣೆ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ನಾಳೆಯೂ ರೆಡ್ ಅಲರ್ಟ್ ಘೋಷಣೆಯಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶುಕ್ರವಾರ ಜಿಲ್ಲೆಯ ಎಲ್ಲ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಮಳೆಯಿಂದ ಜಿಲ್ಲೆಯ ಹಲವೆಡೆ ಅವಾಂತರ ಸಂಭವಿಸುತ್ತಿವೆ. ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತದ ಬೆನ್ನಲ್ಲೇ, ಕುಮಟಾದ ಬರ್ಗಿ ಬಳಿಯೂ ಅಂತಹದ್ದೇ ಅನಾಹುತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಶಿವಮೊಗ್ಗದ ಶಾಲಾ- ಕಾಲೇಜುಗಳಿಗೆ ರಜೆ: ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಸತತ ಮಳೆಯಿಂದ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೋತ್ತರ ಪದವಿ, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ಕುಮಟಾದಲ್ಲಿ ತೆರವು ಕಾರ್ಯಾಚರಣೆ ವೇಳೆಯೇ ಕುಸಿದ ಗುಡ್ಡ; ಭಯಾನಕ ವಿಡಿಯೋ - Landslide In Kumta
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ರಾಜ್ಯ ಹವಾಮಾನ ಇಲಾಖೆಯು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ.
ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೂ ಕೂಡ ಯೆಲ್ಲೋ ಅಲರ್ಟ್ ನೀಡಲಾಗಿದೆ.