ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 3 ದಿನ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆಯಿಂದ ಆಗಸ್ಟ್ 5ರವರೆಗೆ ಭಾರೀ ವರ್ಷಧಾರೆ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅರ್ಲಟ್ ಘೋಷಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆ ಆರೆಂಜ್ ಅರ್ಲಟ್ ಇದ್ದರೆ, ಕೊಡಗು, ಬೆಳಗಾವಿಯಲ್ಲಿ ನಾಳೆ ಯೆಲ್ಲೋ ಅರ್ಲಟ್ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಭಾಗಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯು ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಯಲ್ಲಿ ಸಹ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ.
''ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಆದ್ದರಿಂದ ಸಾಕಷ್ಟು ಮಳೆಯಾಗುತ್ತಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೃಷ್ಣಾ, ಮಲಪ್ರಭಾ ನದಿ ಅಬ್ಬರ: ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿದ್ದ ವಿವಿಧ ಬೆಳೆಗಳು ಜಲಾವೃತ - Krishna River Flood