ಬೆಂಗಳೂರು: ಕಳೆದ ಒಂದು ವಾರ ತಗ್ಗಿದ್ದ ನೈರುತ್ಯ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಶನಿವಾರದಿಂದಲೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ನಂತರದ ಎರಡು ದಿನ ಮುಖ್ಯವಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ನಾಳೆ ದಕ್ಷಿಣ ಕನ್ನಡ, ಗದಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳಾಪುರ, ಚಿಕ್ಕಮಗಳೂರು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್ ಇದೆ.
ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ ಸುರಿಯಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.
''ನೈರುತ್ಯ ಮಾನ್ಸೂನ್ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ದುರ್ಬಲವಾದಂತಿದೆ. ಇಂದೂ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಹ ಮಳೆ ಸುರಿದಿದೆ. ನಿನ್ನೆಯಿಂದ ತುಮಕೂರು ಜಿಲ್ಲೆಯ ಮಿಡಿಗೇಶಿಯಲ್ಲಿ ಅತಿ ಹೆಚ್ಚು 8 ಸೆಂ.ಮೀ. ಮಳೆ ದಾಖಲಾಗಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಎನ್.ಪುವಿಯರಸನ್ ಮಾಹಿತಿ ನೀಡಿದರು.