ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನಕುಮಾರ್, ''ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 4 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆರೋಪಪಟ್ಟಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಕೋರ್ಟ್ ಮುಂದಿನ ಕ್ರಮ ಜರುಗಿಸಲಿದೆ. ಆದ್ದರಿಂದ, ಆರೋಪಿ ಪವಿತ್ರಾ ಗೌಡ ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು. ಈಗಾಗಲೇ ಪ್ರಕರಣದ 7ನೇ ಆರೋಪಿ ಅನುಕುಮಾರ್ ಸಹ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾರೆ'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ನ್ಯಾಯಮೂರ್ತಿಗಳು, ''ನೀವು ಅರ್ಜಿ ಸಲ್ಲಿಸಿದ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರು ಹೇಳುತ್ತಿದ್ದಾರೆ. ನೀವು ಅರ್ಜಿ ಮುಂದುವರೆಸುವಿರಾ ಅಥವಾ ಹಿಂಪಡೆಯುತ್ತೀರಾ? ಈಗಾಗಲೇ ಒಬ್ಬ ಆರೋಪಿ ಅರ್ಜಿ ಹಿಂಪಡೆದಿದ್ದಾರೆ, ನೀವು ಏನು ಮಾಡುತ್ತೀರಿ?'' ಎಂದು ಪವಿತ್ರಾ ಗೌಡ ಪರ ವಕೀಲರನ್ನು ಪ್ರಶ್ನಿಸಿದರು.
''ಅಲ್ಲದೆ, ಈಗ ಆರೋಪಪಟ್ಟಿ ಸಲ್ಲಿಕೆಯಾಗಿರುವ ಕಾರಣ ಸೆಷನ್ಸ್ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು'' ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಇದರಿಂದ, ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿ ಹಿಂಪಡೆದರು.
ಪ್ರಕರಣದ ಹಿನ್ನೆಲೆ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೊದಲ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೈಶಂಕರ್ ಅವರು ಆಗಸ್ಟ್ 31ರಂದು ವಜಾಗೊಳಿಸಿದ್ದರು. ಇದರಿಂದ, ಪವಿತ್ರಾ ಗೌಡ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಸೆ.17ರವರೆಗೆ ದರ್ಶನ್, ಇತರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ - Darshan Judicial Custody