ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮಧ್ಯಂತರ ಜಾಮೀನು ತೆರವು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಕನ್ನಡದಲ್ಲಿರುವ ಪ್ರಕರಣದ ಚಾರ್ಜ್ಶೀಟ್ ಅನ್ನು ಪೊಲೀಸರು ಇಂಗ್ಲಿಷ್ಗೆ ತರ್ಜುಮೆಗೊಳಿಸಿದ್ದಾರೆ.
ಇಂದು (ಸೋಮವಾರ) ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಲಾಪಗಳಿಗೆ ರಜೆ ಇದೆ. ಮಂಗಳವಾರ ಹೈಕೋರ್ಟ್‌ನಲ್ಲಿ ಎಸ್ಎಲ್‌ಪಿ (ಸ್ಪೆಷಲ್ ಲೀವ್ ಪಿಟಿಷನ್) ಇತ್ಯರ್ಥವಾಗುವ ನಿರೀಕ್ಷೆಯಿದೆ. ಆ ಬಳಿಕ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಬುಧವಾರ ಅಥವಾ ಗುರುವಾರ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದ್ದು, ಸದ್ಯದಲ್ಲೇ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದರು.
ದರ್ಶನ್ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಆ ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 30ರಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ, ಆರೋಗ್ಯ ತಪಾಸಣೆಗಾಗಿ ಆರು ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದರು. ಅಂತೆಯೇ ಅವರಿಗೆ ಅಲ್ಲಿನ ವಿಮ್ಸ್ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಿಸಲಾಗಿತ್ತು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಅಗತ್ಯತೆ ಬಗ್ಗೆ ವೈದ್ಯರು ಸಲಹೆ ನೀಡಿದ್ದರು.
ಜೈಲಿನಿಂದ ಬಿಡುಗಡೆಯಾದ ಒಂದು ವಾರದಲ್ಲಿ ವೈದ್ಯಕೀಯ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಮತ್ತು ಚಿಕಿತ್ಸೆ ಕುರಿತ ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ದರ್ಶನ್ ಪರ ವಕೀಲರು ನವೆಂಬರ್ 6ರಂದು ಸಲ್ಲಿಸಿದ್ದಾರೆ.
ಇದನ್ನೂ ಓದಿ: ದರ್ಶನ್‌ಗೆ ಮಧ್ಯಂತರ ಜಾಮೀನು: ಆರೋಗ್ಯ ಚೇತರಿಕೆಗಾಗಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳಿಂದ ಪೂಜೆ