ಕಲಬುರಗಿ : ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರಾಗಿದ್ದ ಯುವ ಕವಿ, ಸಾಹಿತಿ ಲಕ್ಕೂರು ಸಿ ಆನಂದ (42) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ವಿಶ್ವವಿದ್ಯಾಲಯದ ಪೆಟ್ರೋಲ್ ಪಂಪ್ ಬಳಿ ಅವರ ಶವ ಪತ್ತೆಯಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅವರು ಕನ್ನಡ ವಿಷಯದಲ್ಲಿ ಪಿಹೆಚ್‍ಡಿ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಸುದ್ದಿ ತಿಳಿದು ನರೋಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರಾದ ಆನಂದ ದಲಿತ - ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರು. ಕವಿ, ವಿಮರ್ಶಕ, ಅನುವಾದಕರಾಗಿ ಗುರುತಿಸಿಕೊಂಡಿದ್ದ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರ ತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದರು ಎಂದು ತಿಳಿದು ಬಂದಿದೆ.
ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಇದನ್ನೂ ಓದಿ : ಟ್ರ್ಯಾಕ್ಟರ್ಗೆ ಸಿಲುಕಿ ಬಾಲಕ ಸಾವು: ಅಚಾತುರ್ಯಕ್ಕೆ ಮರುಗಿ ಆತ್ಮಹತ್ಯೆಗೆ ಶರಣಾದ ಪಿಹೆಚ್‍ಡಿ ವಿದ್ಯಾರ್ಥಿ