ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಮಹತ್ತರ ಗುರಿಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಡಿಸಿಸಿ ಬ್ಯಾಂಕ್ಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ ಎಂದು ಹೇಳಿದರು.
ಸಹಕಾರಿ ಬ್ಯಾಂಕ್ಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುವುದು. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕ್ಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ತೀರ್ಮಾನ. ಸುಮಾರು 57,000 ರೈತರಿಗೆ ಅನುಕೂಲ. ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇದಕ್ಕೆ 450 ಕೋಟಿ ರೂ. ಅನುದಾನ. ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶದ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದರು.
ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳ ನಿರ್ಮಾಣ ಮಾಡಲಾಗುವುದು. ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಕ್ಕೆ ಬಜೆಟ್ನಲ್ಲಿ ಅನುದಾನ ಘೋಷಣೆಯಾಗಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪಿಸಲಾಗುವುದು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಜ್ ಮಾಡಲು ನಿರ್ಧಾರ. ಎ.ಪಿ.ಎಂ.ಸಿ ಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ Charging ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್ಗಳನ್ನು PPP ಮಾದರಿಯಲ್ಲಿ ಸ್ಥಾಪಿಸುವ ಯೋಜನೆ. ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳ ಸ್ಥಾಪನೆ. ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮ. ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ Weigh Bridge ಗಳನ್ನು ಎ.ಪಿ.ಎಂ.ಸಿ.ಗಳ ಮೂಲಕ ಸ್ಥಾಪನೆ ಮಾಡುವ ಸಿಹಿ ಸುದ್ದಿಯನ್ನು ಕಬ್ಬು ಬೆಳೆಗಾರರಿಗೆ ಈ ಬಾರಿಯ ಬಜೆಟ್ ನೀಡಿದೆ.
ಇದನ್ನೂ ಓದಿ: ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲು; ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು