ಧಾರವಾಡ: ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಮುಂದುವರೆದ ಪರಿಣಾಮ ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಶನಿವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ಶೀತಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ರಾಮದುರ್ಗ ಬಿಟ್ಟು ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಜೆ: ಮತ್ತೊಂದೆಡೆ, ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಹೌದು, ಬಿಟ್ಟು ಬಿಡದೇ ಜಿಲ್ಲಾದ್ಯಂತ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಶಾಲಾ - ಕಾಲೇಜುಗಳಿಗೆ ಶನಿವಾರ ರಜೆ ಇರಲಿದೆ. ನಿರಂತರವಾಗಿ ಧಾರಾಕಾರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ತೀವ್ರ ಸಮಸ್ಯೆ ಆಗುತ್ತಿದೆ. ಹಾಗಾಗಿ, ಶನಿವಾರವೂ ರಜೆ ಘೋಷಿಸಲಾಗಿದೆ. ಮುಂಬರುವ ದಿನಗಳಲ್ಲಿ ಈಗ ನೀಡಿರುವ ರಜೆಗಳನ್ನು ಸರಿದೂಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಖಾನಾಪುರ ಕಾಡಂಚಿನ ಜನ ಒಪ್ಪಿದರೆ ಬೇರೆಡೆ ಸ್ಥಳಾಂತರಕ್ಕೆ ನಿರ್ಧಾರ: ಸಚಿವ ಸತೀಶ ಜಾರಕಿಹೊಳಿ - Minister Satish Jarakiholi