ಬೆಂಗಳೂರು/ನವದೆಹಲಿ: ಅಶ್ಲೀಲ ವಿಡಿಯೋ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.
ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟವಾದ ವಿಚಾರಣಾ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಅಕ್ಟೋಬರ್ 14 ರಂದು ಈ ಪ್ರಕರಣದ ವಿಚಾರಣೆಯನ್ನು ಪುನಾರಂಭಿಸಲಿದೆ. ಇದಕ್ಕೂ ಮುನ್ನ ಜುಲೈನಲ್ಲಿ, ಕರ್ನಾಟಕ ಎಸ್ಐಟಿ ಸಲ್ಲಿಸಿದ ವಿಶೇಷ ರಿಟ್ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿತ್ತು ಮತ್ತು ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಭವಾನಿ ರೇವಣ್ಣ ಅವರಿಗೆ ಸೂಚಿಸಿತ್ತು.
ಈ ವಿಷಯವು ಮಹಿಳೆಯೊಬ್ಬರ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದು, ಅಪರಾಧ ನಡೆದಿದೆಯಾ ಎಂಬುದನ್ನು ವಿಚಾರಣೆಯ ಸಮಯದಲ್ಲಿ ನಿರ್ಧರಿಸಬೇಕಾಗುತ್ತದೆ ಎಂದು ಹೇಳಿದ ಸುಪ್ರೀಂ ಕೋರ್ಟ್ ಪೀಠ, ಈ ವಿಷಯವನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ ಎಂದು ಎಚ್ಚರಿಸಿತ್ತು ಮತ್ತು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಾಯಿಯ ಪಾತ್ರ ಏನೆಂದು ಪ್ರಶ್ನಿಸಿತ್ತು.
ಇದಕ್ಕೆ ರಾಜ್ಯ ಎಸ್ಐಟಿ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ಸಂತ್ರಸ್ತೆ ದಾಖಲಿಸಿದ ಹೇಳಿಕೆಯಲ್ಲಿ ಭವಾನಿ ರೇವಣ್ಣ ಅವರ ಪಾತ್ರವಿರುವುದು ದಾಖಲಾಗಿದೆ ಎಂದು ವಾದ ಮಂಡಿಸಿದ್ದರು.
ಇದನ್ನೂ ಓದಿ : ಸಂತ್ರಸ್ತೆಯ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ - Bhavani Revanna