ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಪೋಕ್ಸೋ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರು ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸಿಐಡಿ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್, ಸೆಪ್ಟೆಂಬರ್ 3ರಂದು ರಾಜ್ಯ ಸರ್ಕಾರವು ಪ್ರೊ. ರವಿವರ್ಮ ಕುಮಾರ್ ಅವರನ್ನು ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ. ಅವರಿಗೆ ಪ್ರಕರಣದ ಮಾಹಿತಿಯನ್ನು (ಬ್ರೀಫ್) ನೀಡಲಾಗುವುದು. ಹೀಗಾಗಿ, ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.
ಈ ಅಂಶವನ್ನು ಪರಿಗಣಿಸಿದ ನ್ಯಾಯಾಲಯವು ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ಮಾಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.
ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಚಾರ್ಜ್ ಶೀಟ್ನಲ್ಲಿ ದರ್ಶನ್ ಸ್ವಇಚ್ಚಾ ಹೇಳಿಕೆ ರಿವೀಲ್: ಏನದು ಸತ್ಯ? - Darshan Statements