ಬೆಂಗಳೂರು: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಬೆಂಗಳೂರು ವಕೀಲರ ಸಂಘದ (ಎಎಬಿ) ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಚುನಾವಣೆಯಲ್ಲಿ 13 ಸಾವಿರಕ್ಕೂ ಅಧಿಕ ಮಂದಿ ಮತ ಚಲಾಯಿಸಿದ್ದರು.
ನಿಕಟಪೂರ್ವ ಅಧ್ಯಕ್ಷರಾಗಿ ಮತ್ತೊಮ್ಮೆ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರು 2,302 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. 4,518 ಮತ ಗಳಿಸುವ ಮೂಲಕ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ 2ನೇ ಸ್ಥಾನ ಪಡೆದುಕೊಂಡರು.
ಇನ್ನುಳಿದಂತೆ, ಆರ್.ರಾಜಣ್ಣ 1,473 ಮತಗಳು, ಮಾಜಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ 378, ನಂಜಪ್ಪ ಕಾಳೇಗೌಡ 123 ಹಾಗೂ ಟಿ.ಎ. ರಾಜಶೇಖರ 90 ಮತಗಳನ್ನು ಗಳಿಸಿದರು.
ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಆಡಳಿತ ಮಂಡಳಿ ಸದಸ್ಯತ್ವ ಹಾಗೂ ಹೈಕೋರ್ಟ್, ಸಿಟಿ ಸಿವಿಲ್ ಕೋರ್ಟ್, ಮೆಯೊ ಹಾಲ್ ಮತ್ತು ಮ್ಯಾಜಿಸ್ಟ್ರೇಟ್ ಘಟಕಗಳಲ್ಲಿನ ಸದಸ್ಯರ ಸ್ಥಾನಕ್ಕೂ ಸಹ ಚುನಾವಣೆ ನಡೆದಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: 'ಕೈ' ಹಿಡಿದ ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ : 'ಕಾಂಗ್ರೆಸ್ ಸೇರುವವರ ಪಟ್ಟಿ ದೊಡ್ಡದಿದೆ' ಎಂದ ಡಿಕೆಶಿ