ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು. ವಿಧಾನಸೌಧದ ವರದಿಗಾರಿಕೆಗೆ ಹೊಸ ಅರ್ಥ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಜಾವಾಣಿ ಪತ್ರಿಕೆಯಿಂದ ನಿವೃತ್ತರಾದ ನಂತರ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ 1984ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ವರದಿಗಾಗಿ ನೀಡುವ ಚಿನ್ನದ ಪದಕ ಸೇರಿದಂತೆ ಗಣ್ಯ ಪತ್ರಕರ್ತರಿಗೆ ನೀಡುವ ಹಲವು ಪ್ರಶಸ್ತಿಗಳು ಕೂಡ ಸಂದಿವೆ.
ಇವರ ಗರಡಿಯಲ್ಲಿ ಪಳಗಿದ್ದ ಹಲವಾರು ಪತ್ರಕರ್ತರು ಇಂದು ರಾಜ್ಯದ ವಿವಿಧ ಮಾಧ್ಯಮಗಳಲ್ಲಿ ಪ್ರಮುಖ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ವೇಮಗಲ್ನ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಅರ್ಜುನ್ ದೇವ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ರಾಜಕಾರಣಿಗಳು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ವರದಿಗಾರರ ಕೂಟ, ಪ್ರೆಸ್‍ಕ್ಲಬ್ ಸೇರಿದಂತೆ ಹಲವಾರು ಸಂಘಟನೆಗಳು ಸಂತಾಪ ಸೂಚಿಸಿವೆ.
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ್ ಅವರ ನಿಧನದ ಸುದ್ದಿ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಸಿಎಂ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ನಾಡಿನ ಹಲವಾರು ಪತ್ರಿಕೆಗಳ ಸಂಪಾದಕರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅರ್ಜುನ ದೇವ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಹಲವು ತಲೆಮಾರುಗಳ ಮಾಧ್ಯಮ ಬೆಳವಣಿಗೆಯ ಕೊಂಡಿಯಾಗಿದ್ದ ಅವರು ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾಗಿದ್ದರು. ಅನೇಕ ಗ್ರಾಮೀಣ ಪ್ರತಿಭೆಗಳನ್ನು ಮಾಧ್ಯಮ ಲೋಕಕ್ಕೆ ಪರಿಚಯಿಸಿದ್ದರು. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಎಕ್ಸ್ನಲ್ಲಿ ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: 30 ವರ್ಷದಲ್ಲಿ ವಿಶ್ವದಾದ್ಯಂತ 1,600ಕ್ಕೂ ಹೆಚ್ಚು ಪತ್ರಕರ್ತರ ಹತ್ಯೆ!