ಬೆಂಗಳೂರು: ಗುತ್ತಿಗೆದಾರನಿಂದ 30 ಲಕ್ಷಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿರುವ ಆರೋಪದಡಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ನೀಡಿರುವ ದೂರಿನನ್ವಯ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ಪಾಲಿಕೆ ಸದಸ್ಯ ವೇಲುನಾಯಕ್ ನೀಡಿರುವ ದೂರಿನನ್ವಯ ಶಾಸಕರ ವಿರುದ್ಧ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ನೀಡಿರುವ ದೂರಿನನ್ವಯ ಶಾಸಕ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ಪಾಲಿಕೆ ಸದಸ್ಯ ವೇಲುನಾಯಕ್ ಎಂಬುವರು ನೀಡಿದ ದೂರಿನನ್ವಯ ಶಾಸಕ ಮುನಿರತ್ನ ಅವರ ವಿರುದ್ಧ ಜಾತಿನಿಂದನೆ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಅವರು ಸೆಪ್ಟೆಂಬರ್ 9 ರಂದು 20 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಇನ್ನು ಜಾತಿ ನಿಂದನೆ ಮಾಡಿದ್ದಾರೆ ಎಂದು ಶುಕ್ರವಾರವಷ್ಟೇ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದರು. ಸದ್ಯ ಶಾಸಕರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಶಿಗ್ಗಾಂವ್ ಉಪಚುನಾವಣೆ: ಟಿಕೆಟ್ಗಾಗಿ ಬೊಮ್ಮಾಯಿ ಪುತ್ರ ಸೇರಿ 57 ಆಕಾಂಕ್ಷಿಗಳಿಂದ ಅರ್ಜಿ - Shiggaon Byelection