ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ನಾಳೆ ಅಂತ್ಯವಾಗಲಿದೆ. ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಇಂದು ಅಂತಿಮ ದಿನವಾಗಿದ್ದು, ಇದುವರೆಗಿನ ತನಿಖೆಯಲ್ಲಿ ಎಸ್ಐಟಿ ಅಧಿಕಾರಿಗಳ ಮುಂದೆ ಪ್ರಜ್ವಲ್ ಪೂರಕವಾಗಿ ಸ್ಪಂದಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಆದ್ದರಿಂದ ಇಂದು ಸ್ಥಳ ಮಹಜರಿಗಾಗಿ ಅವರನ್ನು ಹಾಸನಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ. ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು, ಅವರನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ ಜೂನ್ 6ರ ವರೆಗೆ ಪ್ರಜ್ವಲ್ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿತ್ತು.
ಇಂದು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲು ಕರೆದೊಯ್ಯಲಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಯಲಿದೆ. ಎಸ್ಐಟಿ ಕಸ್ಟಡಿಗೆ ಇಂದು ಅಂತಿಮ ದಿನವಾಗಿರುವುದರಿಂದ ವೈದ್ಯಕೀಯ ಪರೀಕ್ಷೆ ಬಳಿಕ ಹಾಸನದ ಹೊಳೆನರಸೀಪುರದಲ್ಲಿರುವ ಮನೆಯಲ್ಲಿ ಸ್ಥಳ ಮಹಜರಿಗೆ ಕರೆದೊಯ್ಯುವ ಸಾಧ್ಯತೆಯಿದೆ. ನಾಳೆ ನ್ಯಾಯಾಲಯದ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದು, 'ಇದುವರೆಗಿನ ವಿಚಾರಣೆಗೆ ಪ್ರಜ್ವಲ್ ಸಹಕಾರ ನೀಡಿಲ್ಲದಿರುವುದರಿಂದ ತನಿಖೆ ವಿಳಂಬವಾಗುತ್ತಿದ್ದು, ಎಸ್ಐಟಿ ಕಸ್ಟಡಿ ಅವಧಿ ವಿಸ್ತರಿಸುವಂತೆ' ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ: ಮನೆಯ ಊಟಕ್ಕೆ ವಕೀಲರ ಮನವಿ - PRAJWAL 6 DAY SIT CUSTODY