ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವಿವಿಧ ಹಂತದ ಖಾಲಿ ಇರುವ 14,523 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಮಾಧ್ಯಮಗಳ ವರದಿಯನ್ನು ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾದ ವಿವಿಧ ಒಟ್ಟು 34,967 ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಹಂತ-ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿತು.
ಗ್ರಾಮೀಣ ಕಡ್ಡಾಯ ಸೇವೆ ನೆರವಿನಿಂದ ಪರಿಸ್ಥಿತಿ ನಿಭಾವಣೆ: ಈ ವೇಳೆ ಪ್ರಕರಣದಲ್ಲಿ ಹೈಕೋರ್ಟ್‌ಗೆ ನೆರವು ನೀಡಲು ನಿಯೋಜನೆಗೊಂಡಿರುವ ವಕೀಲ ಶ್ರೀಧರ್ ಪ್ರಭು, ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಹುದ್ದೆಗಳ ಸ್ಥಿತಿ ಅತ್ಯಂತ ವಿಶಮವಾಗಿದೆ. ಸರ್ಕಾರದ ಹೇಳಿಕೆಯಂತೆ ಒಟ್ಟು ಮಂಜೂರಾದ 34,967 ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇವೆ. ಗ್ರಾಮೀಣ ಕಡ್ಡಾಯ ಸೇವೆ ನೆರವಿನಿಂದ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಆದರೆ, ಗ್ರಾಮೀಣ ಕಡ್ಡಾಯ ಸೇವೆ ರದ್ದುಪಡಿಸಲಾಗಿದೆ. ಇದು ಸರ್ಕಾರದ ನೀತಿ ನಿರ್ಧಾರಕ ವಿಚಾರ ಆಗಿರಬಹುದು. ಆದರೆ, ಗ್ರಾಮೀಣ ಕಡ್ಡಾಯ ಸೇವೆ ಇಲ್ಲ ಎಂದಾದ ಮೇಲೆ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ 16 ಸಾವಿರಕ್ಕೂ ಅಧಿಕ ಹುದ್ದೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಹೇಳಿದೆ. ಆದರೆ, ಕೇಂದ್ರ ಸರ್ಕಾರ ಈ ಯೋಜನೆಯಡಿ ಅನುದಾನ ನೀಡವುದರಿಂದ, ಕೇಂದ್ರ ಸರ್ಕಾರವೂ ಇದರ ಬಗ್ಗೆ ಗಮನಹರಿಸಬೇಕಿದೆ. ಡಿ ಗ್ರೂಪ್ ಹುದ್ದೆಗಳು ಗ್ರಾಮೀಣ ಆರೋಗ್ಯ ಸೇವೆಯ ಬೆನ್ನೆಲುಬು ಆಗಿವೆ. ಆದರೆ, ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಡಿ.ಗ್ರೂಪ್ ಹುದ್ದೆಗಳು ಖಾಲಿ ಇವೆ ಎಂದು ನ್ಯಾಯಪೀಠದ ಗಮನ ಸೆಳೆದರು.
ಸರ್ಕಾರದ ಪರ ವಕೀಲರು, ಖಾಲಿ ಹುದ್ದೆಗಳ ಭರ್ತಿಗೆ ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ ಅಧಿಕಾರಿಗಳು, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರು ಸೇರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು ಮಂಜೂರಾದ ಹುದ್ದೆಗಳ ಸಂಖ್ಯೆ 34,967 ಇದ್ದು, ಇದರಲ್ಲಿ 20,444 ಹುದ್ದೆಗಳು ಭರ್ತಿಯಾಗಿವೆ. 14,523 ಹುದ್ದೆಗಳು ಖಾಲಿ ಇದ್ದು, ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ 16,501 ಹುದ್ದೆಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಕಡ್ಡಾಯ ಸೇವೆಯಡಿ 2,371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. 204 ಜೂನಿಯರ್ ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. 412 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. 498 -ಫಾರ್ಮಸಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 705 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಖಾಲಿ ಇರುವ 10,253 ಡಿ ಗ್ರೂಪ್ ಹುದ್ದೆಗಳಲ್ಲಿ ಶೇ.75ರಷ್ಟು ಹುದ್ದೆಗಳ ಭರ್ತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.
ಇದನ್ನೂ ಓದಿ: ನಿರುದ್ಯೋಗ ನಿವಾರಣೆಗೆ ಖಾಲಿ ಆಗುವ ಕಾಯಂ ಹುದ್ದೆ ಭರ್ತಿ ಮಾಡಬೇಕು: ಸರ್ಕಾರಗಳಿಗೆ ಹೈಕೋರ್ಟ್ ನಿರ್ದೇಶನ - High Court