ಬೆಂಗಳೂರು: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ತನಿಖಾಧಿಕಾರಿಗಳಿಗೆ ಸೂಚನೆ ನೀಡಿತು.
ತನ್ನ ವಿರುದ್ಧ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೋಮವಾರ ಕೈಗೆತ್ತಿಕೊಂಡರು.
ಅರ್ಜಿದಾರರ ಪರ ವಕೀಲರು, "ಅರ್ಜಿದಾರರ ವಿರುದ್ಧ ಪೊಲೀಸರು ಬಲವಂತದ ಕ್ರಮ ಕೈಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ವಿನಾಕಾರಣ ಅವರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ" ಎಂದು ಆಕ್ಷೇಪಿಸಿದರು. ಇದಕ್ಕೆ ನ್ಯಾಯಪೀಠ, "ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು" ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ವಿವರ: ಜಿ.ದೇವರಾಜೇಗೌಡ ಅವರು ನನ್ನ ಅನುಮತಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನನ್ನನ್ನು ನಿಂದಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿದ್ದಾರೆ ಎಂದು ಆರೋಪಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 19ರಂದು ಪ್ರಕರಣ ದಾಖಲಿಸಿದ್ದರು.
ಚನ್ನರಾಯಪಟ್ಟಣ ಆದ್ಯಾಸ್ ಬಾರ್ ಆ್ಯಡ್ ರೆಸ್ಟೋರೆಂಟ್ ಕಳೆದ ಆರು ತಿಂಗಳಿನಿಂದ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಬಕಾರಿ ಇಲಾಖೆ ಆಯುಕ್ತರು ತನಿಖೆ ನಡೆಸಿ ನಿಯಮ ಉಲ್ಲಂಘಿಸಿರುವುದು ದೃಢಪಟ್ಟಿದ್ದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ವರದಿ ಮಾಡಲಾಗಿದೆ. ಆದರೆ, ಜಿಲ್ಲಾಧಿಕಾರಿ ಸತ್ಯಭಾಮ, ಬಾರ್ ಆ್ಯಂಡ್ ರೆಸ್ಟೊರೆಂಟ್ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಕಡತಗಳನ್ನು ತಮ್ಮ ಬಳಿಯೇ ಇರಿಸಿಕೊಂಡು ಅವ್ಯವಹಾರಗಳನ್ನು ಮಾಡುತ್ತಿರುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೇವರಾಜೇಗೌಡ 15 ಮಾರ್ಚ್ 2024ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ ಎಂದು ಜಿಲ್ಲಾಧಿಕಾರಿ ದೂರಿನಲ್ಲಿ ವಿವರಿಸಿದ್ದರು.