ಬೆಂಗಳೂರು: ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ ಜೆಇಇ/ ನೀಟ್ಗೆ ಉಚಿತ ತರಬೇತಿ ನೀಡಲಾಗುವುದು. ಜೊತೆಗೆ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್ಎಟಿ, ಎಂಎಟಿ ಮತ್ತು ಚಾರ್ಟೆಡ್ ಅಕೌಂಟೆಡ್ ಫೌಂಡೇಷನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡಲು ಕ್ರಮಕ್ಕೆ ಮುಂದಾಗಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಈ ಬಾರಿ ಬಜೆಟ್ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಶೇ 3ರಷ್ಟು ಅಂದರೆ 13334 ಕೋಟಿ ರೂ ಹಣವನ್ನು ಮೀಸಲಿರಿಸಲಾಗಿದೆ.
ಅಲೆಮಾರಿ ಆಯೋಗ ರಚನೆ: ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ಮಾಡಲು ʻಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗʼ ರಚನೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳು ಎಂದು ಮರುನಾಮಕರಣ ಮಾಡಲಾಗುವುದು ಎಂದು ಬಜೆಟ್ನಲ್ಲಿ ಪ್ರಕಟಿಸಲಾಗಿದೆ.
ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ನೀಡಿರುವ ಹೊಸ ಯೋಜನೆ: ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗುವುದು. ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು. ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ಪ್ರತಿ ಮಾಹೆಗೆ 100 ರೂ. ನಂತೆ ಹೆಚ್ಚಿಸಲಾಗುವುದು ಹಣಕಾಸು ಸಚಿವರು ಹೇಳಿದ್ದಾರೆ.
ವಸತಿ ನಿಲಯ ಅಭಿವೃದ್ಧಿಗೆ ಕ್ರಮ: ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 100 ಸಂಖ್ಯಾಬಲದ ಮೆಟ್ರಿಕ್ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳ ಪ್ರಾರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಅಭಿವೃದ್ಧಿ.
ಕಾರ್ಪಸ್ ಫಂಡ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಫಸ್ ಅನ್ನು ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು.
ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,447 ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,121 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ. ಪದ್ಮಶ್ರೀ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು ಎಂದರು
ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ ಬೆಂಗಳೂರು ಪೂರ್ವ ಭಾಗದಲ್ಲಿ 500 ಸಂಖ್ಯೆಯ ಒಂದು ನಿರಾಶ್ರಿತರ ಪರಿಹಾರ ಕೇಂದ್ರವನ್ನು ಪ್ರಾರಂಭಿಸಲಾಗುವುದು. 10 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭ ಮಾಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುವುದು ಎಂದು ಸಿಎಂ ತಮ್ಮ ಬಜೆಟ್ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಮಾಜಿ ದೇವದಾಸಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರ ಮಾಸಾಶನ ಹೆಚ್ಚಳ