ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯ ಬಳಿಕ ಪತನವಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಕಾಂಗ್ರೆಸ್ ಭವನದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 135 ಶಾಸಕರು ಮತ್ತು ಓರ್ವ ಪಕ್ಷೇತರ ಶಾಸಕರ ಬೆಂಬಲ ಇರುವಾಗ, ಆ ಚಿಂತನೆ ಯಾಕೆ ಬೇಕು?. ನಮ್ಮ ಕಾರ್ಯಕ್ರಮಗಳು ನಮಗೆ ಶಕ್ತಿ ಕೊಟ್ಟಿವೆ. ಜನ ನಮ್ಮ ಜೊತೆಗಿದ್ದಾರೆ. ನಮ್ಮ ಕಾರ್ಯಕ್ರಮದ ಫಲಾನುಭವಿಗಳು ಎಲ್ಲರೂ ಮತ ಹಾಕಿದರೆ 28 ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆ ಎಂದರು.
ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗ ಅಂಥ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಚಿಕ್ಕೋಡಿಯಲ್ಲಿ ದಲಿತ ಸಮುದಾಯದ ಅಭ್ಯರ್ಥಿ ಶಂಭು ಕಲ್ಲೋಳ್ಕರ್ ಪಕ್ಷೇತರವಾಗಿ ಸ್ಪರ್ಧಿಸಿರೋದು ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಇದು ಈಗ ನನ್ನ ಗಮನಕ್ಕೆ ಬಂದಿದೆ. ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.
ಹಾಸನ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ ಹೊಂದಾಣಿಕೆಯಾಗಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುನಿಯಪ್ಪ, ಜೋಶಿ ರಾಜಕೀಯ ದುರುದ್ದೇಶಕ್ಕಾಗಿ ಈ ರೀತಿ ಹೇಳಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಸರ್ಕಾರ ಎಸ್‌ಐಟಿ ನೇಮಿಸಿದೆ. ಅದು ತನಿಖೆ ಕೈಗೊಂಡಿದ್ದು, ಅವರು ನೀಡುವ ವರದಿ ಆಧರಿಸಿ ಕ್ರಮ ವಹಿಸಲಾಗುವುದು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ವಿಷಯದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.
ರಾಜ್ಯದ ಬಡವರಿಗೆ ಅಕ್ಕಿ ನೀಡುವಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡಿದೆ. ತಮ್ಮ ಬಳಿ ದಾಸ್ತಾನಿರುವ ಅಕ್ಕಿಗೆ ಹಣ ಸಂದಾಯ ಮಾಡುತ್ತೇವೆ ಎಂದರೂ ಕೊಡದೆ ರಾಜ್ಯದ ಜನರಿಗೆ ಮೋಸ ಮಾಡಿದೆ ಎಂದು ಇದೇ ವೇಳೆ ಆರೋಪಿಸಿದ ಮುನಿಯಪ್ಪ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಕ್ರಮಬದ್ಧವಾಗಿ ಯೋಜನೆಗಳನ್ನು ಜಾರಿಗೊಳಿಸಿದೆ. ಕಲ್ಯಾಣ ಕರ್ನಾಟಕ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪೂರಕವಾದ ವಾತಾವರಣವಿದೆ. ಸಂವಿಧಾನ, ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡುವಂತೆ ಕೇಳಿಕೊಂಡರು.
ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ತೂಕದಲ್ಲಿ ವ್ಯತ್ಯಾಸವಾಗಿ ರೈತರಿಗೆ ಅನ್ಯಾಯವಾಗುತ್ತಿದೆ ಎನ್ನುವ ಅಂಶ ನನ್ನ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಸುಮಾರು 78 ಸಕ್ಕರೆ ಕಾರ್ಖಾನೆಗಳು ಇವೆ. ಇದೇ ಮೊದಲ ಬಾರಿಗೆ ಕಬ್ಬಿನ ಕಾರ್ಖಾನೆಗೆ ಹೋಗಿ ಮೌಲ್ಯಮಾಪನ ಸಿಬ್ಬಂದಿಗಳು ತಪಾಸಣೆ ಮಾಡಬೇಕೆಂದು ಸೂಚನೆ ನೀಡಿದೆ. ಒಂದು ಕೆ.ಜಿ. ಸಹ ರೈತರಿಗೆ ಮೋಸವಾಗದಂತೆ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಸಚಿವ ಮುನಿಯಪ್ಪ ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ, ಮುಖಂಡರಾದ ಗಜು ಧರನಾಯಕ, ಮಲ್ಲೇಶ ಚೌಗುಲೆ, ಜಯಶ್ರೀ ಮಾಳಗಿ, ಸಿದ್ರಾಯಿ ಮೇತ್ರಿ, ಯಲ್ಲಪ್ಪ ಹುದಲಿ, ಮೋಹನ ಹಿರೇಮನಿ ಸೇರಿ ಮತ್ತಿತರರು ಇದ್ದರು.
ಇದನ್ನೂ ಓದಿ: 'ಡರೋ ಮತ್, ಭಾಗೋ ಮತ್': ಅಮೇಠಿ ಬದಲು ರಾಯ್ ಬರೇಲಿಯಲ್ಲಿ ರಾಹುಲ್ ಸ್ಪರ್ಧೆಗೆ ಮೋದಿ ಲೇವಡಿ - Narendra Modi Campaign