ಬೆಂಗಳೂರು: ಭೋಪಾಲ್‌ನಲ್ಲಿ ವಶಕ್ಕೆ ಪಡೆದಿರುವ ರಾಜ್ಯದ ರೈತರನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ಗೆ ಪತ್ರ ಬರೆದು ಕೋರಿದ್ದಾರೆ.
ರಾಜ್ಯದ ರೈತರ ತಂಡ ದೆಹಲಿ ರೈತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ಕಾರಣ ಇಲ್ಲದೆ ರಾಜ್ಯದ ರೈತರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ನಾಲ್ಕು ದಿನಗಳಿಂದ ಅವರು ಪೊಲೀಸ್ ವಶದಲ್ಲಿದ್ದಾರೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.
ವಶಕ್ಕೆ ಪಡೆಯಲಾದ ರಾಜ್ಯದ ರೈತರನ್ನು ಮಧ್ಯಪ್ರದೇಶ ಪೊಲೀಸರು ವಾರಣಾಸಿಗೆ ಸ್ಥಳಾಂತರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವುದು ರೈತರ ಸಾಂವಿಧಾನಿಕ ಹಕ್ಕಾಗಿದೆ. ಆದರೆ ಅವರನ್ನು ವಶಕ್ಕೆ ಪಡೆದಿದ್ದು ದುರದೃಷ್ಟಕರ ವಿಚಾರವಾಗಿದೆ. ಅವರ ಜೊತೆ ಮಧ್ಯಪ್ರದೇಶ ಪೊಲೀಸರು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಪತ್ರದಲ್ಲಿ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯದ ರೈತರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಒಂದು ಕಡೆಯಿಂದ ಇನ್ನೊಂದು ಕಡೆಗೆ ಸ್ಥಳಾಂತರಿಸದಂತೆ ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್ಗೆ ಪತ್ರ ಬರೆದಿದ್ದಾರೆ. ಇನ್ನು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ರೈತರ ಯೋಗಕ್ಷೇಮ ವಿಚಾರಿಸಿದರು.
ಇದನ್ನೂ ಓದಿ: ರೈತರ ದೆಹಲಿ ಚಲೋ: ಕೇಂದ್ರದ ಜೊತೆ ಇಂದು ಮೂರನೇ ಸುತ್ತಿನ ಸಭೆ, ರೈಲು ತಡೆ ಎಚ್ಚರಿಕೆ
ರೈತರ ಬಂಧನ ಕುರಿತು ಫೆ.12 ರಂದ ಸಿಎಂ ಟ್ವಿಟ್ ಮಾಡಿ, ದೆಹಲಿಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು. "ಬಂಧಿಸಲಾಗಿರುವ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ" ಎಂದು ಆರೋಪಿಸಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.
"ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು, ಈ ರೀತಿ ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ" ಎಂದು ಕಿಡಿಕಾರಿದ್ದರು.
ಇದನ್ನೂ ಓದಿ: ತೀವ್ರಗೊಂಡ ರೈತರ ಹೋರಾಟ: 'ದೆಹಲಿ ಚಲೋ' ಪ್ರತಿಭಟನೆಯ ಚಿತ್ರಣ ಇಲ್ಲಿದೆ!