ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಹಂಚಿಕೆ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಬಿಜೆಪಿ ಮುಖಂಡ ಹಾಗೂ ವಕೀಲ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ತನಿಖಾಧಿಕಾರಿಯ ಮುಂದೆ ವಿಚಾರಣೆ ಹಾಜರಾಗುವಂತೆ ಸೂಚಿಸಲಾಗಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಅನ್ನು ಹಾಸನದ ವಿವಿಧೆಡೆ ಹಂಚಲಾಗುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್‌ನ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಎಂಬುವರು, ಏಪ್ರಿಲ್ 23 ರಂದು ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್‌ಗೌಡ ಹಾಗೂ ಚೇತನ್‌ಗೌಡ ಎಂಬುವರ ವಿರುದ್ಧ ಹಾಸನದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಹಾಸನ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಮೇ 8 ರಂದು ನ್ಯಾಯಾಲಯ ತಿರಸ್ಕರಿಸಿತ್ತು.
ಇದನ್ನೂ ಓದಿ: ಪೊಲೀಸರ ಮೇಲೆ ನಂಬಿಕೆಯಿದೆ, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah