ಮೈಸೂರು: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ನೀಡಿದ್ದ ದೂರು ಸಂಬಂಧ, ಎಫ್ಐಆರ್ ದಾಖಲಿಸಿಕೊಂಡಿರುವ ದೇವರಾಜ ಠಾಣೆ ಪೊಲೀಸರು ನೀಡಿದ ನೋಟಿಸ್ ಹಿನ್ನೆಲೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದರು.
ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಭಾವ ಇದೆ ಎಂದು ನಾನು ಮಾಡಿರುವ ಎಲ್ಲಾ ಆರೋಪಗಳಿಗೂ ಸಾಕ್ಷಿಗಳನ್ನು ನೀಡಿದ್ದೇನೆ. ಆದರೂ ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಇಂದು ವಿಚಾರಣೆಗೆ ಹಾಜರಾಗಿ, ನನ್ನ ಹೇಳಿಕೆಗಳನ್ನು ದಾಖಲಿಸಿದ್ದೇನೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಬೆದರಿಸುತ್ತಿರುವ ಎಂ. ಲಕ್ಷ್ಮಣ ಮೇಲೆ ಕ್ರಮ ಕೈಗೊಳ್ಳುವಂತೆ ಎಸಿಪಿಗೆ ದೂರು ನೀಡಿದ್ದೇನೆ" ಎಂದು ತಿಳಿಸಿದರು.
ಲಕ್ಷ್ಮಣ್ ದೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಠಾಣೆಗೆ ಕೆಲ ದಿನಗಳ ಹಿಂದೆ ದೂರು ನೀಡಿದ್ದರು.
ಇದನ್ನೂ ಓದಿ: ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಿ; ಮತ್ತೊಂದು ದೂರು ಸಲ್ಲಿಸಿದ ಜಿಲ್ಲಾ ಕಾಂಗ್ರೆಸ್ ನಿಯೋಗ