ಹುಬ್ಬಳ್ಳಿ: ಸಾರ್ವಜನಿಕರ ಬೇಡಿಕೆಯ ಮೇರೆಗೆ ಮಹಾಶಿವರಾತ್ರಿ ಆಚರಣೆಗೆ ತೆರಳುವ ಭಕ್ತರು ಹಾಗೂ ಇತರ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಗೋಕರ್ಣ ಹಾಗೂ ಮುರುಡೇಶ್ವರಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಮಹಾಶಿವರಾತ್ರಿ ಆಚರಣೆಯ ಪ್ರಯುಕ್ತ ಶಿವರಾತ್ರಿ ಜಾಗರಣೆ, ಶಿವಸ್ತುತಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಲು ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಗೋಕರ್ಣ ಹಾಗೂ ಮುರುಡೇಶ್ವರಕ್ಕೆ ಹುಬ್ಬಳ್ಳಿ ಧಾರವಾಡ ಅವಳಿ ನಗರ ಸುತ್ತಮುತ್ತಲಿನ ಊರುಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಹ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಆದ್ದರಿಂದ ಈ ಅವಧಿಯಲ್ಲಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರಿಂದ ಮನವಿ ಬಂದಿರುತ್ತದೆ.
ಪ್ರಯಾಣಿಕರ ಬೇಡಿಕೆಯಂತೆ ಉಭಯ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಫೆ.25 ರಂದು ಮಂಗಳವಾರ ರಾತ್ರಿ ಮತ್ತು 26 ರಂದು ಬುಧವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋಕರ್ಣ ಹಾಗೂ ಮುರುಡೇಶ್ವರಕ್ಕೆ ನೇರ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಬಸ್ಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.
ಹೆಚ್ಚಿನ ಮಾಹಿತಿಗಾಗಿ ಗೋಕುಲ ರಸ್ತೆ ಬಸ್ ನಿಲ್ದಾಣಾಧಿಕಾರಿ (7760991682 / 9060355688) ಸಂಪರ್ಕಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಬೆಂಗಳೂರಲ್ಲಿ WPL ಪಂದ್ಯಗಳು: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ, ಮೆಟ್ರೋ ಸೇವೆ ವಿಸ್ತರಣೆ
ಇದನ್ನೂ ಓದಿ: ಹುಬ್ಬಳ್ಳಿ-ಗೋವಾ ರೈಲು ಸಂಪರ್ಕ ಕಡಿತ: NWKRTCಯಿಂದ ವಿಶೇಷ ಬಸ್ ವ್ಯವಸ್ಥೆ