ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಗ್ರೌಂಡ್ ಠಾಣಾ ಪೊಲೀಸರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ.
ಬಿಜೆಪಿ ಕಾನೂನು ಪ್ರಕೋಷ್ಟದ ಸಂಚಾಲಕ ಯೋಗೇಂದ್ರ ಹೋಡಘಟ್ಟ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಅಲ್ಲದೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕರ್ನಾಟಕದ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿ.ಆರ್.ನಾಯ್ಡು ವಿರುದ್ಧವೂ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿದ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: 2024ರ ಜನವರಿ ಮೊದಲ ವಾರದಲ್ಲಿ ಹುಬ್ಬಳ್ಳಿಯ ಪೊಲೀಸರು 60 ವರ್ಷದ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಎಂಬವರನ್ನು 31 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು. ಇದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕದಿಂದ ಪ್ರತಿಭಟನೆಗಳು ನಡೆದಿದ್ದವು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಸಚಿವ ಸುನೀಲ್ ಕುಮಾರ್, ಕೆ.ಎಸ್.ಈಶ್ವರಪ್ಪ, ಪ್ರತಾಪ್ ಸಿಂಹ, ಸಿ.ಟಿ.ರವಿ ಸೇರಿದಂತೆ ಹಲವು ಮುಖಂಡರು 'ನಾನೂ ಕರಸೇವಕ ನನ್ನನ್ನು ಬಂಧಿಸಿ' ಎಂಬುದಾಗಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು.
ಇದೇ ಫೋಟೋಗಳನ್ನು ಪ್ಯಾಬ್ರಿಕೇಟ್ ಮಾಡಿಕೊಂಡು ಬಳಕೆ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡುವ ಮೂಲಕ ವಿವಿಧ ವರ್ಗಗಳ ನಾಗರಿಕರ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ. ಆ ಮೂಲಕ ಬಿಜೆಪಿ ಮುಖಂಡರ ವಿರುದ್ಧ ದ್ವೇಷ ಕಾರುವುದು ಮತ್ತು ಪ್ರಚೋದನೆ ಮಾಡುವುದಕ್ಕೆ ಮುಂದಾಗಿದ್ದಾರೆ. ಜತೆಗೆ, ಆಧಾರವಿಲ್ಲದ ಆರೋಪಗಳನ್ನು ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದರು.
ಈ ಪೋಸ್ಟ್ ಅನ್ನು ವಿಶ್ವದ ವಿವಿಧ ಭಾಗಗಳಲ್ಲಿ ಸಾವಿರಾರು ಜನ ವೀಕ್ಷಣೆ ಮಾಡಿದ್ದಾರೆ. ಇಂತಹ ಕೃತ್ಯಗಳನ್ನು ಮುಂದುವರೆಸಿ ಮತ್ತೆ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಲಿದ್ದಾರೆ. ಆದ್ದರಿಂದ ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಕೋರಿದ್ದರು.
ಇದನ್ನೂ ಓದಿ: ವಿಚ್ಛೇದನ ಪ್ರಕರಣಗಳಲ್ಲಿ ಪತಿಯ ಆದಾಯದ ಶೇ.10ರಷ್ಟನ್ನು ಪತ್ನಿಗೆ ಜೀವನಾಂಶ ನೀಡಿದರೆ ಹೆಚ್ಚಾಗುವುದಿಲ್ಲ : ಹೈಕೋರ್ಟ್