ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಸರ್ಕಾರದ ಧೋರಣೆ ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಂದ್ಗೆ ಕರೆ ಕೊಡಲಾಗಿದೆ.
ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನಲ್ಲಿ ಬಂದ್ಗೆ ಕರೆ ನೀಡಲಾಗಿದೆ. ಮೂರು ತಾಲೂಕಿನ ವ್ಯಾಪ್ತಿಯಲ್ಲಿ ಮಲೆನಾಡು ಹಿತ ರಕ್ಷಣಾ ಸಮಿತಿ ಹಾಗೂ ರೈತರು ಇದೇ ತಿಂಗಳು 17 ರಂದು ಬಂದ್ಗೆ ಕರೆ ನೀಡಿದ್ದಾರೆ. ಅಂದು ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಯಾವುದೇ ಮುಲಾಜಿಗೂ ಒಳಗಾಗದೆ ಅರಣ್ಯ ಇಲಾಖೆ ಸಿಬ್ಬಂದಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸುತ್ತಿದ್ದು, ರೈತರು ಎಷ್ಟೇ ಕಾಡಿ ಬೇಡಿದರೂ ಕೂಡ ತಮ್ಮ ಕೆಲಸ ಮುಂದುವರೆಸಿದ್ದಾರೆ. ಈ ಹಿನ್ನಲೆ ಸರ್ಕಾರದ ವಿರುದ್ದ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯ ಕರೆಗೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದ್ದು, ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆಯನ್ನು ಸಂಘಟನೆಗಳು ನಡೆಸಲಿವೆ.
ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣವನ್ನು ಖಂಡಿಸಿ ಬಂದ್ಗೆ ಕರೆ ನೀಡಲಾಗಿದ್ದು, ಕೊಪ್ಪದಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಸಂಘಟನೆ ನಡೆಸಲಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಇದಕ್ಕೆ ವ್ಯಾಪಕ ಬೆಂಬಲ ದೊರಕುತ್ತಿದ್ದು, ಆ ದಿನ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂಬುದು ತಿಳಿದುಬಂದಿದೆ.
ಇದನ್ನೂ ಓದಿ : ಪಶ್ಚಿಮಘಟ್ಟದಲ್ಲಿ 69 ಎಕರೆ ಅರಣ್ಯ ಒತ್ತುವರಿ ತೆರವು - Western Ghats Encroachment