ಬೆಂಗಳೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಜಾರಿಯಲ್ಲಿರುವಾಗ ರಾಜ್ಯ ಸರ್ಕಾರದ ಸುತ್ತೋಲೆ ಮೂಲಕ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅಧಿಕಾರವಿಲ್ಲ ಎಂದು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು ಹೈಕೋರ್ಟ್ಗೆ ವಿವರಿಸಿದ್ದಾರೆ.
ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9 ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ರಾಜೇಶ್ ಕೆ. ರೈ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ವಕೀಲರು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ತಿಳಿಸಿರುವಂತೆ 6 ರಿಂದ 14 ವರ್ಷದ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಆದ್ದರಿಂದ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿರುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿಯಬೇಕು ಎಂದು ಮನವಿ ಮಾಡಿದೆ.
ರಾಜ್ಯ ಶಿಕ್ಷಣ ಇಲಾಖೆ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಬೇಕಾದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಬಂಧಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಚರ್ಚೆ ನಡೆಸದೇ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ವಿಚಾರಣೆ ವೇಳೆ ಅರ್ಜಿಗೆ ವಕಾಲತ್ತು ಹಾಕಿರುವ ವಕೀಲರನ್ನು ವಾದ ಮಂಡಿಸುವುದಕ್ಕೆ ಪೀಠ ಸೂಚನೆ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ತಾವು ಪ್ರಕರಣದಿಂದ ವಿಮುಕ್ತರಾಗಿರುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮುಂದಿನ ವಿಚಾರಣೆ ವೇಳೆ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಸಂಘಟನೆಗಳು ಪದಾಧಿಕಾರಿಗಳು ಹಾಗೂ ವಕೀಲ ಕೆ.ವಿ. ಧನಂಜಯ್ ಖುದ್ದು ಹಾಜರಿರಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಇದನ್ನೂ ಓದಿ: ನೂತನ ಚುನಾವಣಾ ಆಯುಕ್ತರ ನೇಮಕ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ