ನವದೆಹಲಿ: 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿತು. ವಿದ್ಯಾರ್ಥಿಗಳು, ಪೋಷಕರು ಮಾತ್ರವಲ್ಲದೆ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ಆತಂಕ ಮತ್ತು ದೊಡ್ಡ ಸಂಕಟ ಸೃಷ್ಟಿಸಲು ಕರ್ನಾಟಕ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರನ್ನೊಳಗೊಂಡ ನ್ಯಾಯಪೀಠವು ಪರೀಕ್ಷೆಗಳ ಫಲಿತಾಂಶವನ್ನು ತಡೆಹಿಡಿಯಬೇಕು ಮತ್ತು ಅದನ್ನು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅಥವಾ ಪೋಷಕರಿಗೆ ತಿಳಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.
ಮಾರ್ಚ್ 22ರಂದು ಕರ್ನಾಟಕ ಹೈಕೋರ್ಟ್ ಹೊರಡಿಸಿದ ಆದೇಶದ ನಂತರ ಕರ್ನಾಟಕ ರಾಜ್ಯ ಗುಣಮಟ್ಟ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯು ಏಪ್ರಿಲ್ 8 ರಂದು ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲು ಶಾಲೆಗಳಿಗೆ ಏಪ್ರಿಲ್ 4 ರಂದು ನಿರ್ದೇಶನ ನೀಡಿದೆ ಎಂದು ಅರ್ಜಿದಾರರು ವಾದಿಸಿದ್ದರು.
ಹೈಕೋರ್ಟ್ನ ಆದೇಶವು ಮೇಲ್ನೋಟಕ್ಕೆ ಶಿಕ್ಷಣ ಹಕ್ಕು ಕಾಯ್ದೆ 2009 (ಆರ್ಟಿಇ) ಗೆ ಅನುಗುಣವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಮಾತ್ರವಲ್ಲದೆ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ಹಾನಿ ಮತ್ತು ದೊಡ್ಡ ಸಂಕಟವನ್ನು ಸೃಷ್ಟಿಸಲು ಪ್ರಯತ್ನಿಸಿದೆ ಎಂದು ನ್ಯಾಯಪೀಠ ಹೇಳಿದೆ.
ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಲು ಹಠ ತೊಟ್ಟಂತೆ ತೋರುತ್ತದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 23 ಕ್ಕೆ ನಿಗದಿಪಡಿಸಿದೆ.
ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.
5, 8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳ ಸಂಕ್ಷಿಪ್ತ ಮೌಲ್ಯಮಾಪನಕ್ಕಾಗಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಹಸಿರು ನಿಶಾನೆ ತೋರಿದ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಮಾರ್ಚ್ 12 ರಂದು ತಳ್ಳಿಹಾಕಿತ್ತು.
"ನೀವು ದೇಶದ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದ್ದೀರಿ ಮತ್ತು ಈಗ ನೀವು ಅದನ್ನು ಸಂಕೀರ್ಣಗೊಳಿಸಲು ಬಯಸುತ್ತೀರಿ. ದಯವಿಟ್ಟು ಹಾಗೆ ಮಾಡಬೇಡಿ....." ಎಂದು ಆಗ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.
ಇದನ್ನೂ ಓದಿ : ರಾಜ್ಯ ಸರ್ಕಾರ ಸುತ್ತೋಲೆ ಮೂಲಕ ಬೋರ್ಡ್ ಪರೀಕ್ಷೆ ನಡೆಸಲಾಗದು: ಖಾಸಗಿ ಶಿಕ್ಷಣ ಸಂಸ್ಥೆಗಳ ವಾದ