ಬೆಂಗಳೂರು: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಪತ್ನಿ ಹಾಗು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ದಿಂದ ರಾಜಕಾರಣ ಆರಂಭಿಸಿ ಕಾಂಗ್ರೆಸ್ನಲ್ಲಿಯೇ ರಾಜಕಾರಣ ಮುಂದುವರೆಸಿಕೊಂಡು ಬಂದಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಆಪ್ತರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.
ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ರಾಜಾ ವೆಂಕಟಪ್ಪ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. 1994ರಲ್ಲಿ ಮೊದಲ ಬಾರಿ ಶಾಸಕರಾಗಿದ್ದ ಅವರು ನಾಲ್ಕು ಬಾರಿ ಗೆಲುವು ಕಂಡಿದ್ದರು. ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಒತ್ತಡವೂ ಅವರ ಮೇಲಿತ್ತು, ಕಳೆದ ಒಂದು ವಾರದ ಹಿಂದೆ ಕಿಡ್ನಿ ಸ್ಟೋನ್ ಆಪರೇಷನ್ ಮಾಡಿಸಿಕೊಂಡಿದ್ದರು. ಆಪರೇಷನ್ ಸಫಲವಾಗಿತ್ತು. ಆದರೆ ನಂತರ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಖರ್ಗೆ, ಸಿಎಂ ಸಿದ್ದರಾಮಯ್ಯ ಸಂತಾಪ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ರಾಜ ವೆಂಕಟಪ್ಪ ನಾಯಕ್ ಅವರು ಸುರಪುರದ ಜನಪ್ರಿಯ ಶಾಸಕರಾಗಿ ಚುನಾಯಿತರಾಗಿದ್ದವರು. ಜೊತೆಗೆ ಕರ್ನಾಟಕ ರಾಜ್ಯದ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಇತ್ತೀಚೆಗೆ ನೇಮಕವಾಗಿದ್ದರು. ಅವರು ನನಗೆ ಚಿರಪರಿಚಿತರು. ಸದಾ ಹಸನ್ಮುಖಿಯಾಗಿ ಎಲ್ಲರ ಜೊತೆ ಬೆರೆತು ಕೆಲಸ ಮಾಡುತ್ತಿದ್ದವರು. ಇವರು ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಶ್ರೀಯುತರ ನಿಧನದಿಂದ ಕಲಬುರಗಿ ವಿಭಾಗದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲೆಂದು ವಿನಂತಿಸುತ್ತೇನೆ ಎಂದು ಸಂತಾಪ ಸಂದೇಶದ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ಚಂದ್ರ ಅಂಜಾರಿಯ ಪದಗ್ರಹಣ